ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ ಆದೇಶ ಉಲ್ಲಂಘನೆ ಆರೋಪ: ಅರಣ್ಯಾಧಿಕಾರಿ ಖುದ್ದು ಹಾಜರಿಗೆ ಆದೇಶ

Published 15 ಫೆಬ್ರುವರಿ 2024, 16:27 IST
Last Updated 15 ಫೆಬ್ರುವರಿ 2024, 16:27 IST
ಅಕ್ಷರ ಗಾತ್ರ

ಬೆಂಗಳೂರು: ಹೈಕೋರ್ಟ್‌ ನೀಡಿದ್ದ ಮಧ್ಯಂತರ ಆದೇಶವನ್ನು ಮಾನ್ಯ ಮಾಡದೆ, ಅರಣ್ಯ ಒತ್ತುವರಿ ಆರೋಪದಡಿ ಸಾಗುವಳಿ ಚೀಟಿ ಹೊಂದಿದ ರೈತರ ಮಾವಿನ ತೋಪುಗಳನ್ನು ತೆರವುಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆ ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲ ಮತ್ತು ವಲಯ ಅರಣ್ಯಾಧಿಕಾರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಉಪ್ಪಾರಪಲ್ಲಿಯ ಗುಲ್ಜಾರ್‌ ಪಾಷ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. 

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಶಿವಪ್ರಕಾಶ್‌, ‘ಒತ್ತುವರಿ ಆರೋಪದಡಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿ ಏಡುಕೊಂಡಲು ಮತ್ತು ಅನಿಲ್‌ ಕುಮಾರ್ ಅವರು ಹೈಕೋರ್ಟ್‌ ನೀಡಿದ್ದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ್ದಾರೆ’ ಎಂದು ಆರೋಪಿಸಿದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ ಮುಂದಿನ ವಿಚಾರಣೆ ವೇಳೆಗೆ ಇಬ್ಬರೂ ಅಧಿಕಾರಿಗಳು ಕೋರ್ಟ್‌ಗೆ ಖುದ್ದು ಹಾಜರಾಗುವಂತೆ ಆದೇಶಿಸಿ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿತು.

ಆರೋಪ ಏನು?: ‘ಪ್ರಕರಣದ ಪ್ರತಿವಾದಿಗಳೂ ಆದ ಅರಣ್ಯ ಅಧಿಕಾರಿಗಳು ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಶ್ರೀನಿವಾಸಪುರ ತಾಲ್ಲೂಕಿನ ಪಾಳ್ಯ, ಯಲವಳ್ಳಿ, ಕೇತಗಾನಹಳ್ಳಿ, ಚಿಂತೆ ಕುಂಟೆ, ನಾರಮಾಕಲ ಹಳ್ಳಿ, ಉಪ್ಪರಹಳ್ಳಿ, ಕೋಟಬಲ್ಲಪಲ್ಲಿ, ಇಲದೋಣಿ, ಲಕ್ಷ್ಮೀಪುರ, ಪಾತಪಲ್ಲಿ, ದ್ವಾರಸಂದ್ರ, ಆಲಂಬಗಿರಿ, ಸುಣ್ಣಕಲ್ಲು, ಜಿಂಕಲವಾರಿಪಲ್ಲಿ ಸೇರಿದಂತೆ ಮುಂತಾದ ಕಡೆ 1 ಲಕ್ಷ 30 ಸಾವಿರಕ್ಕೂ ಹೆಚ್ಚಿನ ಮರಗಳನ್ನು ಕಡಿಯಲು ಕಾರಣವಾಗಿದ್ದಾರೆ’ ಎಂಬುದು ಅರ್ಜಿದಾರರ ಆರೋಪ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT