ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಾದ್ಯಂತ ಅ. 2ರಂದು ಗಾಂಧಿ ನಡಿಗೆ, ಸ್ವಚ್ಛತೆ ಪ್ರತಿಜ್ಞೆ: ಶಿವಕುಮಾರ್

Published : 28 ಸೆಪ್ಟೆಂಬರ್ 2024, 9:36 IST
Last Updated : 28 ಸೆಪ್ಟೆಂಬರ್ 2024, 9:36 IST
ಫಾಲೋ ಮಾಡಿ
Comments

ಬೆಂಗಳೂರು: 'ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಕಾರಣ, ಒಂದು ವರ್ಷ ರಾಜ್ಯದಾದ್ಯಂತ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಇದೇ ಅಕ್ಟೋಬರ್ 2ರಂದು 'ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ, ತಾಲ್ಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿದೆ' ಎಂದರು.

'ಬೆಂಗಳೂರಿನಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆ ವರೆಗೆ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು' ಎಂದು ತಿಳಿಸಿದರು.

500 ಶಾಲಾ ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ: 'ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಅಂದು ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮತ್ತು ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು' ಎಂದರು.

ಶ್ವೇತ ವಸ್ತ್ರ ಧರಿಸಿ ನಡಿಗೆ: ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಈ ನಡಿಗೆ ವೇಳೆ ಬಿಳಿ ವಸ್ತ್ರ, ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗುವುದು' ಎಂದು ತಿಳಿಸಿದರು.

ಆ್ಯಪ್ ಮೂಲಕ ನೋಂದಣಿ: 'ಸಾರ್ವಜನಿಕರು ಪ್ರತಿಜ್ಞಾ ವಿಧಿ ತೆಗೆದುಕೊಳ್ಳಲು ಒಂದು ಆಪ್ ಸಿದ್ಧಪಡಿಸಲಾಗಿದ್ದು, ಈಗಾಗಲೇ 35 ಸಾವಿರ ಮಂದಿ ಈ ಆ್ಯಪ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ' ಎಂದು ಶಿವಕುಮಾರ್ ತಿಳಿಸಿದರು.

'ಪ್ರತಿಜ್ಞಾ ವಿಧಿ ಪಡೆದವರಿಗೆ ಆನ್ ಲೈನ್ ಪ್ರಮಾಣಪತ್ರ ನೀಡಲಾಗುವುದು. ಇದು ಮೊದಲ ಹಂತದ ಕಾರ್ಯಕ್ರಮವಾಗಿದ್ದು, ಇಡೀ ವರ್ಷ ಬೇರೆ ಬೇರೆ ಕಾರ್ಯಕ್ರಮ ಆಯೋಜಿಸಲಾಗುವುದು. ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮವನ್ನು ಅಂದು ಮಧ್ಯಾಹ್ನ 12 ಗಂಟೆಯ ಬಳಿಕ ಬೆಂಗಳೂರಿನ ಭಾರತ ಜೋಡೋ ಭವನದಲ್ಲಿ ಮಾಡಲಾಗುವುದು' ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT