ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.27ರಂದು ಸರ್ಕಾರಿ ನೌಕರರ ಮಹಾ ಸಮ್ಮೇಳನ: ಸಿ.ಎಸ್‌.ಷಡಾಕ್ಷರಿ

3 ಲಕ್ಷ ನೌಕರರು, ಒಂದು ಸಾವಿರ ಬಸ್‌ಗಳ ವ್ಯವಸ್ಥೆ
Published 15 ಫೆಬ್ರುವರಿ 2024, 15:31 IST
Last Updated 15 ಫೆಬ್ರುವರಿ 2024, 15:31 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಅರಮನೆ ಮೈದಾನದಲ್ಲಿ ಫೆ.27ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಮೂರು ಲಕ್ಷಕ್ಕೂ ಹೆಚ್ಚಿನ ನೌಕರರು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7 ವರ್ಷಗಳ ನಂತರ ನಡೆಯುತ್ತಿರುವ ಮಹಾ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಅಧಿಕಾರಿಗಳು ಭಾಗವಹಿಸುವರು. ಸಮ್ಮೇಳನಕ್ಕೆ ಬರುವ ನೌಕರರಿಗಾಗಿ ಪ್ರತಿ ತಾಲ್ಲೂಕು ಕೇಂದ್ರದಿಂದಲೂ ಬಸ್‌ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ಒಂದು ಸಾವಿರ ಬಸ್‌ಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಸರ್ಕಾರ ವಿಶೇಷ ಸಾಂದರ್ಭಿಕ ರಜೆ ನೀಡಿದೆ  ಎಂದು ಮಾಹಿತಿ ನೀಡಿದರು.

‘ಆಡಳಿತದಲ್ಲಿ ಕಾರ್ಯಕ್ಷಮತೆ’ ಕುರಿತು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌, ‘ನೌಕರರ ಆರೋಗ್ಯ ಸುಧಾರಣೆ’ ಕುರಿತು ಹೃದ್ರೋಗ ತಜ್ಞ ಡಾ.ಸಿ.ಎನ್‌.ಮಂಜುನಾಥ್ ವಿಶೇಷ ಉಪನ್ಯಾಸ ನೀಡುವರು ಎಂದರು.

ನೌಕರರ ಪ್ರಮುಖ ಬೇಡಿಕೆಗಳನ್ನು ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಗುವುದು. 7ನೇ ವೇತನ ಆಯೋಗದಿಂದ ವರದಿ ಪಡೆದು, ಶಿಫಾರಸುಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕು. ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ನೌಕರರ ವೇತನದಿಂದ ಕಡಿತ ಮಾಡುತ್ತಿರುವ ಶೇ 10ರಷ್ಟು ವಂತಿಗೆಯನ್ನು ನಿಲ್ಲಿಸಲು ಆದೇಶ ಹೊರಡಿಸಬೇಕು. ನೌಕರರು ಹಾಗೂ ಅವರ ಅವಲಂಬಿತ ಕುಟುಂಬಗಳ ಸದಸ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ‘ಕರ್ನಾಟಕ ಆರೋಗ್ಯ ಸಂಜೀವಿನ ಯೋಜನೆ’ ಅನುಷ್ಠಾನ ಮಾಡಬೇಕು. ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಲಾಗುತ್ತದೆ ಎಂದು ವಿವರ ನೀಡಿದರು.

ಬೆಳಿಗ್ಗೆ 11ಕ್ಕೆ ಆರಂಭವಾಗುವ ಕಾರ್ಯಕ್ರಮ ಮಧ್ಯಾಹ್ನ 3ಕ್ಕೆ ಮುಕ್ತಾಯವಾಗಲಿದೆ ಎಂದರು.

ಸಂಘದ ಪದಾಧಿಕಾರಿಗಳಾದ ಮೋಹನ್‌ಕುಮಾರ್, ಶ್ರೀನಿವಾಸ ತಿಮ್ಮೇಗೌಡ, ಸಿದ್ದರಾಮಣ್ಣ, ಸದಾನಂದ್‌, ಸಿದ್ದಬಸಪ್ಪ, ಬಸವರಾಜ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT