ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿ ತೆರೆಯಲು ಮುಂದಾದ ಕಾಂಗ್ರೆಸ್‌?: HDK

Published 24 ಸೆಪ್ಟೆಂಬರ್ 2023, 10:03 IST
Last Updated 24 ಸೆಪ್ಟೆಂಬರ್ 2023, 10:03 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮೂರು ಸಾವಿರ ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳನ್ನು ತೆರಲು ಕಾಂಗ್ರೆಸ್‌ ಸರ್ಕಾರ ಹೊರಟಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕುಮಾರಸ್ವಾಮಿ, ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ? ಎಂದು ಪ್ರಶ್ನಿಸಿದ್ದಾರೆ.

ಗ್ಯಾರಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸುತ್ತಿದೆ. ಮೂರು ಸಾವಿರ ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರಕಾರ. ನಾರಿಯರಿಗೆ 'ಶಕ್ತಿ' ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. 'ಗೃಹಲಕ್ಷ್ಮೀ' ಎಂದ ಸರಕಾರ ಅವರ ಬಾಳಿಗೆ ಗ್ರಹಣವಾಗಿದೆ. 'ಗೃಹಜ್ಯೋತಿ' ಎಂದ ಸರಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. 'ಅನ್ನಭಾಗ್ಯ' ಎಂದ ಸರಕಾರ, ಈಗ 'ಮದ್ಯಭಾಗ್ಯ' ಎನ್ನುತ್ತಿದೆ ಎಂದು ಕುಟುಕಿದ್ದಾರೆ.

ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು!. ಕಾಂಗ್ರೆಸ್ ಸರಕಾರ 'ಕರ್ನಾಟಕವನ್ನು ಕುಡುಕರ ತೋಟ'ವನ್ನಾಗಿ ಮಾಡಲಿದೆ!! ಚುನಾವಣೆಗೆ ಮುನ್ನ 'ಸರ್ವಜನಾಂಗದ ಶಾಂತಿಯ ತೋಟ' ಎನ್ನುತ್ತಿದ್ದರು, ಗೆದ್ದ ನಂತರ 'ಕರ್ನಾಟಕ ಕುಡುಕರ ತೋಟ' ಎನ್ನುತ್ತಿದ್ದಾರೆ. ಇಧು ಕಾಂಗ್ರೆಸ್‌ನ ಸಂಕಲ್ಪ ಎಂದು ಟೀಕಿಸಿದ್ದಾರೆ.

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದು ಹೇಳಿ, ಈಗ ಮನೆಮನೆಗೂ 'ಮದ್ಯಭಾಗ್ಯ' ನೀಡಲು ಹೊರಟಿದೆ. ಸರಕಾರವು ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ!!. ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT