ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ಯಾರಂಟಿ’ ಅಪಪ್ರಚಾರ: ಬಿಜೆಪಿ–ಜೆಡಿಎಸ್‌ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Published 25 ಏಪ್ರಿಲ್ 2024, 15:48 IST
Last Updated 25 ಏಪ್ರಿಲ್ 2024, 15:48 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ಲೋಕಸಭಾ ಚುನಾವಣೆಗೆ ರಾಷ್ಟ್ರೀಯ ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ತಡೆಯುವುದಾಗಿ ಅಪಪ್ರಚಾರ ನಡೆಸುತ್ತಿರುವ ಬಿಜೆಪಿ–ಜೆಡಿಎಸ್‌ ವಿರುದ್ಧ ಕ್ರಮ ಜರುಗಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು ಸಲ್ಲಿಸಿದೆ. 

ಮುಖ್ಯ ಚುನಾವಣಾಧಿಕಾರಿಗಳನ್ನು ಗುರುವಾರ ಭೇಟಿ ಮಾಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಈ ದೂರು ಸಲ್ಲಿಸಿದ್ದಾರೆ.

ಸುಮಾರು ಐದು ಕೋಟಿ ಜನರು ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಬಿಜೆಪಿ, ಜೆಡಿಎಸ್‌ ಸೇರಿದಂತೆ ಎಲ್ಲ ಪಕ್ಷಗಳ ಕಾರ್ಯಕರ್ತರನ್ನೂ ಒಳಗೊಂಡ ಫಲಾನುಭವಿಗಳು ಇದ್ದಾರೆ. ಬಡವರ್ಗದ ಜನರ ಬದುಕು ಹಸನಾಗಿದೆ. 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಮಹಾಲಕ್ಷ್ಮಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದೆ. ಯೋಜನೆ ಜಾರಿಯಾದರೆ ಮಹಿಳೆಯರ ಖಾತೆಗೆ ವರ್ಷಕ್ಕೆ ₹1 ಲಕ್ಷ ಪಾವತಿಯಾಗಲಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಚುನಾವಣಾ ಆಯೋಗ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ನಿಯಮಗಳಿಗೆ ಒಳಪಟ್ಟು ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯ ಮೂಲಕ ಇಂತಹ ಭರವಸೆ ನೀಡಿದೆ. ಆದರೆ, ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಜೆಡಿಎಸ್‌–ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಕುರಿತು ಅಪಪ್ರಚಾರ ನಡೆಸುತ್ತಿದ್ದಾರೆ. ಅವಕಾಶ, ಅಧಿಕಾರ ಸಿಕ್ಕರೆ ಯೋಜನೆ ಸ್ಥಗಿತಗೊಳಿಸುವುದಾಗಿ ಹೇಳುತ್ತಿದ್ದಾರೆ. ಇಂತಹ ಹೇಳಿಕೆಗಳು ವಾಸ್ತವ ಮರೆಮಾಚುವ ಹಾಗೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಅವಮಾನ ಮಾಡುವ ಪ್ರಯತ್ನ ಒಳಗೊಂಡಿವೆ. ಕಾಂಗ್ರೆಸ್‌ ಪಕ್ಷಕ್ಕೆ ಮತಗಳು ಚಲಾವಣೆಯಾಗದಂತೆ ತಡೆಯುವ ಉದ್ದೇಶವಿದೆ. ಇದು ಚುನಾವಣಾ ನಿಯಮಗಳ ಉಲ್ಲಂಘನೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT