ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಗಣತಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಟೀಕೆ: ಇಲ್ಲಿದೆ ಡಿಕೆಶಿ ಕೊಟ್ಟ ಸ್ಪಷ್ಟನೆ

Published 12 ಡಿಸೆಂಬರ್ 2023, 13:13 IST
Last Updated 12 ಡಿಸೆಂಬರ್ 2023, 13:13 IST
ಅಕ್ಷರ ಗಾತ್ರ

ಬೆಳಗಾವಿ: ‘ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಜಾತಿ ಗಣತಿಯ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನನ್ನ ಅಭಿಮತ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಜಾತಿ ಗಣತಿ ವಿರೋಧಿಸಿ ಬರೆದ ಪತ್ರಕ್ಕೆ ಸಹಿ ಹಾಕಿದ್ದಕ್ಕೆ ಡಿ.ಕೆ. ಶಿವಕುಮಾರ್‌ ಅವರನ್ನು ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದರು. ವರದಿ ಬಿಡುಗಡೆಗೆ ಶಿವಕುಮಾರ್ ವಿರೋಧಿಸುತ್ತಿದ್ದಾರೆ, ಬಿಜೆಪಿಯೂ ವಿರೋಧಿಸುತ್ತಿದೆ. ಈ ವಿಷಯದಲ್ಲಿ ಪ್ರಬಲ ಜಾತಿಗಳ ಜನರೆಲ್ಲ ಆಂತರಿಕವಾಗಿ ಒಗ್ಗಟ್ಟಾಗಿದ್ದಾರೆ ಎಂದು ಖರ್ಗೆ ರಾಜ್ಯಸಭೆಯಲ್ಲೇ ಟೀಕಿಸಿದ್ದರು. ಈ ಬಗ್ಗೆ ಸುದ್ದಿಗಾರರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಅವರು, ‘ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ’ ಎಂದರು.

‘ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂದು ದೂರುಗಳು ಬಂದಿವೆ. ಎಲ್ಲ ಸಮುದಾಯಗಳು ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕು ಪಡೆಯಬೇಕು. ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ’ ಎಂದರು.

‘ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಸಮಾಜದ ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರ್ಕಾರದ ಜಾತಿ ವರ್ಗೀಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲ ವರ್ಗದ ಜನರನ್ನು ಸಮಾನವಾಗಿ ನೋಡಬೇಕು’ ಎಂದರು.

ಜಾತಿ ಗಣತಿಯ ಕೆಲವು ದಾಖಲೆಗಳು ಕಾಣೆಯಾಗಿರುವ ಬಗ್ಗೆ ವರದಿಗಳಿವೆ ಎಂದು ಕೇಳಿದಾಗ, ‘ಈ ವಿಚಾರ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಜೊತೆ ಮಾತನಾಡಿದ್ದು, ಈ ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆ. ಕಾರ್ಯದರ್ಶಿಗಳ ಸಹಿ ಇಲ್ಲದಿದ್ದರೆ ಹೇಗೆ ಸಿಂಧುವಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ’ ಎಂದರು.

ರಾಜ್ಯಸಭೆಯಲ್ಲಿ ‘ಜಾತಿ ಗಣತಿ’ ಸದ್ದು

ಸೋಮವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದ ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ಅವರು, ‘ಜಾತಿ ಗಣತಿ ವರದಿ ಸ್ವೀಕರಿಸದಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಡಿ.ಕೆ.ಶಿವಕುಮಾರ್ ಅವರು ಸಹಿ ಹಾಕಿದ್ದಾರೆ’ ಎಂದು ಹೇಳಿದ್ದರು.

ಈ ಕುರಿತು ಪ್ರತ್ರಿಕ್ರಿಯಿಸಿದ್ದ ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧಿಸುತ್ತಿದ್ದಾರೆ. ಇದನ್ನು ಬಿಜೆಪಿ ಕೂಡ ವಿರೋಧಿಸುತ್ತಿದೆ. ಬಲಿಷ್ಠ ಜಾತಿ ಜನರೆಲ್ಲಾ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ’ ಎಂದು ಹೇಳಿದ್ದರು.

ಸ್ವಪಕ್ಷ ನಾಯಕ ಡಿಕೆಶಿ ವಿರುದ್ಧವೇ ಮಲ್ಲಿಕಾರ್ಜುನ ಖರ್ಗೆ ಮಾತನಾಡಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇಂದು ಖರ್ಗೆ ಅವರ ಹೇಳಿಕೆ ಕುರಿತು ಡಿಕೆಶಿ ಸ್ಪಷ್ಟನೆ ನೀಡಿದ್ದಾರೆ.

ಒಕ್ಕಲಿಗರ ಸಂಘ ಸಲ್ಲಿಸಿದ ಮನವಿಗೆ ನಾನು ಸಹಿ ಮಾಡಬಾರದೇ?: ಡಿಕೆಶಿ

ಬೆಂಗಳೂರು: ‘ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ, ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈಚೆಗೆ ಸುದ್ದಿಗಾರರ ಜೊತೆ ಮಾತನಾಡಿದ್ದ ಅವರು, ‘ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಸಿಗಬೇಕು ಎಂದು ಅನೇಕ ಸಮುದಾಯಗಳು ಆಗ್ರಹಿಸಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಬೇಧ ಮರೆತು ಹೋರಾಟ ಮಾಡಲಾಗುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿದ್ದಾರೆ’ ಎಂದಿದ್ದರು.

‘ಜಾತಿ ಗಣತಿ ಸ್ವೀಕರಿಸದಂತೆ ಮುಖ್ಯಮಂತ್ರಿಗೆ ಒಕ್ಕಲಿಗರ ಸಂಘ ಸಲ್ಲಿಸಿದ ಮನವಿ ಪತ್ರಕ್ಕೆ ನೀವು ಕೂಡಾ ಸಹಿ ಹಾಕಿದ್ದೀರಲ್ಲವೇ?’ ಎಂದು ಕೇಳಿದ ಪ್ರಶ್ನೆಗೆ, ‘ನಾನು ಸಹಿ ಮಾಡಬಾರದೇ? ಎಷ್ಟು ಜನ ಸಚಿವರು ಈ ವಿಚಾರದಲ್ಲಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲ ನಾಯಕರಲ್ಲೂ ಇರುತ್ತದೆ’ ಎಂದು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT