ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಿವೃತ್ತ ನ್ಯಾಯಾಧೀಶ ಹುನಗುಂದ ನೇಮಕಕ್ಕೆ ಆಕ್ಷೇಪ
Published 30 ಆಗಸ್ಟ್ 2023, 15:59 IST
Last Updated 30 ಆಗಸ್ಟ್ 2023, 15:59 IST
ಅಕ್ಷರ ಗಾತ್ರ

ಬೆಂಗಳೂರು: ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯ ಸಿ.ಜಿ.ಹುನಗುಂದ ಅವರನ್ನು ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ, ಪ್ರತಿವಾದಿಗಳಾದ ರಾಜ್ಯ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಭೂ ಕಬಳಿಕೆ ವಿಶೇಷ ನ್ಯಾಯಾಲಯದ ರಿಜಿಸ್ಟ್ರಾರ್‌, ಕಾನೂನು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಸಿ.ಜಿ.ಹುನಗುಂದ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಅರ್ಜಿಗೆ ಸಂಬಂಧಿಸಿದಂತೆ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?:

ಸಿ.ಜಿ.ಹುನಗುಂದ ಅವರು ರಾಮನಗರ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶರಾಗಿ ನಿವೃತ್ತರಾದ 2012ರ ನವೆಂಬರ್ 29 ರಿಂದ 2017ರ ನವೆಂಬರ್ 28ರವರೆಗೆ ಐದು ವರ್ಷಗಳ ಕಾಲ ರಾಜ್ಯ ಮಾನವ ಹಕ್ಕುಗಳ ಆಯೋಗದ ಸ‌ದಸ್ಯರಾಗಿದ್ದರು. ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆಯ ಕಲಂ 24(3) ರ ಪ್ರಕಾರ ಆಯೋಗದ ಅಧ್ಯಕ್ಷರು ಅಥವಾ ಸದಸ್ಯರಾಗಿದ್ದವರು ತದನಂತರ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ಹುದ್ದೆಗಳನ್ನು ಹೊಂದುವಂತಿಲ್ಲ. ಕಾಯ್ದೆಯ ಅಂಶಗಳನ್ನು ಮರೆಮಾಚಿ ಹುನುಗಂದ ಅವರನ್ನು 2022ರ ಅಕ್ಟೋಬರ್ 21ರಂದು ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

‘ನೇಮಕಾತಿ ರದ್ದುಪಡಿಸಬೇಕು. ಅರ್ಜಿ ಇತ್ಯರ್ಥವಾಗುವತನಕ 2022ರ ಅಕ್ಟೋಬರ್ 21ರಂದು ಹೊರಡಿಸಲಾದ ಅಧಿಸೂಚನೆಯ ಕಾರ್ಯಾಚರಣೆಗೆ ತಡೆ ನೀಡಬೇಕು‘ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT