ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ: ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

Published 8 ಮೇ 2024, 10:16 IST
Last Updated 8 ಮೇ 2024, 10:16 IST
ಅಕ್ಷರ ಗಾತ್ರ

ಬೆಂಗಳೂರು: ‘ಅತ್ಯಾಚಾರ ಸಂತ್ರಸ್ತೆ ಅಪಹರಣ’ ಪ್ರಕರಣದ ಆರೋಪಿಯಾದ ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸದ್ಯ ಅವರು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಸೇರಿದ್ದಾರೆ.

ಮೈಸೂರು ಜಿಲ್ಲೆಯ ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಎಸ್‌ಐಟಿ ಅಧಿಕಾರಿಗಳು, ರೇವಣ್ಣ ಅವರನ್ನು ಮೇ 4ರಂದು ಬಂಧಿಸಿದ್ದರು. ಮರುದಿನವೇ ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ, ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದರು.

ಕಸ್ಟಡಿ ಅವಧಿ ಮುಗಿದಿದ್ದರಿಂದ ರೇವಣ್ಣ ಅವರನ್ನು 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಗುರುವಾರ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಯನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು.

ವಿಚಾರಣೆ ಬಳಿಕ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ನ್ಯಾಯಾಲಯದಿಂದ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ರೇವಣ್ಣ ಅವರನ್ನು ಅಧಿಕಾರಿಗಳು ಜೈಲಿಗೆ ಕರೆತರುತ್ತಿದ್ದ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಜೈಲಿನ ಮುಂಭಾಗದ ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸಲಾಗಿತ್ತು.

ವಿಚಾರಣಾಧೀನ ಕೈದಿ ನಂಬರ್ ಹಂಚಿಕೆ: ರೇವಣ್ಣ ಅವರನ್ನು ಜೈಲಿಗೆ ದಾಖಲು ಮಾಡಿಕೊಂಡಿರುವ ಸಿಬ್ಬಂದಿ, ಅವರಿಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ್ದಾರೆ. ಜೈಲಿನ ಬ್ಯಾರಕ್‌ನಲ್ಲಿ ಸಹ ಕೈದಿಗಳ ಜೊತೆಯಲ್ಲಿ ರೇವಣ್ಣ ಅವರನ್ನು ಇರಿಸಿರುವುದಾಗಿ ಗೊತ್ತಾಗಿದೆ.

ರೇವಣ್ಣಗೆ ಹೊಟ್ಟೆ ನೋವು: ಎಸ್‌ಐಟಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ಎಚ್‌.ಡಿ. ರೇವಣ್ಣ ಅವರು ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದರೆಂದು ಗೊತ್ತಾಗಿದೆ.

‘ಊಟದಲ್ಲಿ ವ್ಯತ್ಯಾಸವಾಗಿದ್ದರಿಂದ ರೇವಣ್ಣ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಅವರ ಆರೋಗ್ಯ ಸ್ಥಿತಿ ಮಂಗಳವಾರ ತೀವ್ರ ಹದಗೆಟ್ಟಿತ್ತು. ಅದೇ ಕಾರಣಕ್ಕೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆ ಕೊಡಿಸಲಾಗಿದೆ. ಬುಧವಾರ ಬೆಳಿಗ್ಗೆ ಅವರು ಚೇತರಿಸಿಕೊಂಡಿದ್ದಾರೆ. ಈ ವಿಚಾರವನ್ನು ನ್ಯಾಯಾಲಯದ ಗಮನಕ್ಕೂ ತರಲಾಗಿದೆ’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ರೇವಣ್ಣ ಜಾಮೀನು ಅರ್ಜಿ: ಇಂದು ವಿಚಾರಣೆ

‘ಶಾಸಕ ರೇವಣ್ಣ ಸಲ್ಲಿಸಿರುವ ನಿಯಮಿತ (ರೆಗ್ಯುಲರ್) ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಬೇಕು’ ಎಂದು ಎಸ್ಐಟಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಈ ಕುರಿತಂತೆ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್‌–82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಬುಧವಾರ ವಿಚಾರಣೆ ನಡೆಸಿದರು. ಈ ವೇಳೆ ಎಸ್ಐಟಿ ಪರ ವಿಶೇಷ ಪ್ರಾಸಿಕ್ಯೂಟರ್ ಬಿ.ಎನ್‌.ಜಗದೀಶ್ ಆಕ್ಷೇಪಣೆ ಸಲ್ಲಿಸಲು ಒಂದು ವಾರ ಸಮಯಾವಕಾಶ ನೀಡುವಂತೆ ಕೋರಿದರು. ಆದರೆ ಇದನ್ನು ಒಪ್ಪದ ನ್ಯಾಯಾಧೀಶರು ವಿಚಾರಣೆಯನ್ನು ಗುರುವಾರಕ್ಕೆ (ಮೇ 9) ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT