ಬೆಂಗಳೂರು: ರಾಜ್ಯದ ಉಡುಪಿ, ದಕ್ಷಿಣ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಈ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯೊಂದಿಗೆ ಗಾಳಿಯ ವೇಗವು 30ರಿಂದ 40 ಕಿ.ಮೀ ತಲುಪುವ ಸಾಧ್ಯತೆಯಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ.ಗಳಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.