ಬೆಂಗಳೂರು: ರಾಜ್ಯದಲ್ಲಿ ಮೇ 31ರ ಬಳಿಕ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 9 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ–ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಮೇ 31ರಂದು ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಜೂನ್ 1ರಂದು ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಸೋಮವಾರ ಹಾಗೂ ಮಂಗಳವಾರ ಸಹ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಕೆಲವೊಮ್ಮೆ ಮೇಲ್ಮೈ ಸುಳಿಗಾಳಿ ಬೀಸಲಿದೆ. ರಾಜಧಾನಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಭಾನುವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಕಳೆದ 24 ಗಂಟೆಯಲ್ಲಿ ಹಾಸನ ಜಿಲ್ಲೆಯ ಬೇಲೂರು, ಮೈಸೂರಿನ ಹುಣಸೂರಿನಲ್ಲಿ ತಲಾ 2 ಸೆಂ.ಮೀ, ಚಿಕ್ಕಮಗಳೂರಿನ ಕಳಸ, ಉತ್ತರ ಕನ್ನಡದ ಶಿರಾಲಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.