ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಉತ್ತರ ಕನ್ನಡ, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಕರಾವಳಿಯ ಉಳಿದ ಜಿಲ್ಲೆಗಳ ಬಹುತೇಕ ಕಡೆ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗಂಟೆಗೆ 45 ಕಿ.ಮೀ.ಯಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಎಚ್ಚರ ವಹಿಸಬೇಕು ಎಂದು ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ಹಾಗೂ ಸೋಮವಾರವೂ ಕರಾವಳಿಯ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಸಂಭವವಿದ್ದು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.