ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಗಣತಿ ಪ್ರಶ್ನಿಸಿದ ಅರ್ಜಿಗಳ ವಿಚಾರಣೆ 21ಕ್ಕೆ ಮುಂದೂಡಿಕೆ

Published 5 ಮಾರ್ಚ್ 2024, 23:30 IST
Last Updated 5 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಪ್ರಶ್ನಿಸಲಾಗಿರುವ ಅರ್ಜಿಗಳ ಕುರಿತಂತೆ ಸುದೀರ್ಘ ವಿಚಾರಣೆ ಅಗತ್ಯವಿದ್ದು ಸದ್ಯಕ್ಕೆ ಈ ಅರ್ಜಿಗಳ ಮೇಲೆ ಯಾವುದೇ ರೀತಿಯ ಆದೇಶ ನೀಡಲಾಗದು’ ಎಂದು ಹೈಕೋರ್ಟ್ ಹೇಳಿದೆ.

ಈ ಕುರಿತಂತೆ ಸಲ್ಲಿಸಲಾದ ಹಲವು ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಟಿ.ಜೆ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ನಿಗದಿಯಾಗಿದ್ದವು. 

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ, ‘ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದಿಂದ ವರದಿಯನ್ನು 2024ರ ಫೆಬ್ರುವರಿ 29ಕ್ಕೆ ಸ್ವೀಕರಿಸಿದೆ. ಈ ಕುರಿತಂತೆ ಸರ್ಕಾರ ಇನ್ನೂ ನಿರ್ಧಾರಕ್ಕೆ ಕೈಗೊಳ್ಳಬೇಕಿದೆ’ ಎಂದು ವಿವರಿಸಿ ಪ್ರಮಾಣ ಪತ್ರ ಸಲ್ಲಿಸಿದರು.

ಇದೇ ವೇಳೆ ಅರ್ಜಿದಾರರ ಪರ ವಕೀಲರು, ‘ಅರ್ಜಿಯ ಮುಂದಿನ ವಿಚಾರಣೆಯವರೆಗೂ ವರದಿಗೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗದಂತೆ ನಿರ್ದೇಶಿಸಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅರ್ಜಿಗಳಿಗೆ ಸಂಬಂಧಿಸಿದಂತೆ ಸುಧೀರ್ಘ ವಿಚಾರಣೆಯ ಅಗತ್ಯವಿದೆ’ ಎಂಬ ಅಭಿಪ್ರಾಯದೊಂದಿಗೆ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿತು.

ಪ್ರಮಾಣ ಪತ್ರದಲ್ಲಿ ಏನಿದೆ?: ‘ಜಾತಿಗಣತಿ ವರದಿಯನ್ನು ಅನುಷ್ಠಾನಗೊಳಿಸಲು ನಿರ್ದೇಶಿಸಬೇಕು ಎಂದು ಕೋರಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ  ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಒಟ್ಟು 13 ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳು ಸಲ್ಲಿಸಿರುವ ಅರ್ಜಿ ಹಾಗೂ ಜಾತಿ ಆಧಾರಿತ ಗಣತಿಗೆ ನೀಡಲಾಗಿರುವ ಸರ್ಕಾರದ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಲಾಗಿರುವ ಅರ್ಜಿಗಳ ವಿಚಾರಣೆ ಈಗ ನಿರರ್ಥಕ. ಅಂತೆಯೇ, ಜಾತಿ ಗಣತಿಯನ್ನು ಪ್ರಶ್ನಿಸಿ ಬೀದರ್‌ನ ಶಿವರಾಜ ಕಣಶೆಟ್ಟಿ ಹಾಗೂ ಇತರರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವ ಅಗತ್ಯವಿಲ್ಲ’ ಎಂದು ಸರ್ಕಾರ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT