ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಪಡಿಸಿದ ಹೈಕೋರ್ಟ್

Published 22 ಮೇ 2023, 6:58 IST
Last Updated 22 ಮೇ 2023, 6:58 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠಕ್ಕೆ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು.

ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಹೈಕೋರ್ಟ್ ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಪೀಠವು, "ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ" ಎಂದು ಸ್ಪಷ್ಟಪಡಿಸಿದೆ.

"ಮಠ ಮತ್ತು ಶೈಕ್ಷಣಿಕ ಆಡಳಿತ ನಿರ್ವಹಣೆಗೆ ಪರ್ಯಾಯ ಯೋಜನೆ ರೂಪಿಸಲು ಮಠದ ಭಕ್ತರು ಹಾಗೂ ಲಿಂಗಾಯತ ಸಮುದಾಯದ ಪ್ರಮುಖರು ನಿರ್ಧರಿಸಬಹುದು. ಈ ನಿಟ್ಟಿನಲ್ಲಿ ನಾಲ್ಕು ವಾರಗಳ ಕಾಲ‌ ಸರ್ಕಾರ ನೇಮಿಸಿರುವ ಆಡಳಿತಾಧಿಕಾರಿ ಮುಂದುವರಿಯಬಹುದು" ಎಂದು ಹೇಳಿದೆ.

ಶರಣರು ಆರೋಪಿ: ಚಿತ್ರದುರ್ಗ ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಮತ್ತು ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷರೂ ಆದ ಶಿವಮೂರ್ತಿ ಮುರುಘರಾಜೇಂದ್ರ ಶರಣರು ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಶರಣರು 2022ರ ಸೆಪ್ಟೆಂಬರ್‌ 1ರಿಂದ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್‌ಜೆಎಂ ವಿದ್ಯಾಪೀಠದ ದಿನನಿತ್ಯದ ಕಾರ್ಯ ಚಟುವಟಿಕೆಗಳಿಗೆ ಹಾಗೂ ಮೇಲುಸ್ತುವಾರಿ ನಡೆಸಲು, ಮಠದ ಚರ ಮತ್ತು ಸ್ಥಿರ ಆಸ್ತಿಗಳನ್ನು ಸಂರಕ್ಷಿಸಲು ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ದೃಷ್ಟಿಯಿಂದ ನಿವೃತ್ತ ಐಎಎಸ್‌ ಅಧಿಕಾರಿ ಬಿ.ಎಸ್‌.ವಸ್ತ್ರದ ಅವರನ್ನು ಮಠದ ಟ್ರಸ್ಟ್‌ ಮತ್ತು ಶಿಕ್ಷಣ ಸಂಸ್ಥೆಗೆ ಆಡಳಿತಾಧಿಕಾರಿಯನ್ನಾಗಿ ಸರ್ಕಾರ 2022ರ ಡಿಸೆಂಬರ್ 13ರಂದು ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT