ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿನಯ ಕುಲಕರ್ಣಿ ವಿರುದ್ಧದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

Published 12 ಜನವರಿ 2024, 15:31 IST
Last Updated 12 ಜನವರಿ 2024, 15:31 IST
ಅಕ್ಷರ ಗಾತ್ರ

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಶಾಸಕ ವಿನಯ ಕುಲಕರ್ಣಿ ವಿರುದ್ಧದ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗಳಿಗೆ ತಡೆ ನೀಡಬೇಕೆಂಬ ಮನವಿಯನ್ನು ಹೈಕೋರ್ಟ್‌ ಬಲವಾಗಿ ತಳ್ಳಿ ಹಾಕಿದೆ.

‘ನನ್ನ ವಿರುದ್ಧ ಹೊರಿಸಲಾಗಿರುವ ದೋಷಾರೋಪಣೆ ಮತ್ತು ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ನ್ಯಾಯಾಲಯದ ನ್ಯಾಯ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು‘ ಎಂದು ಕೋರಿ ವಿನಯ ಕುಲಕರ್ಣಿ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ‘ದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಶುಕ್ರವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ವಿನಯ ಕುಲಕರ್ಣಿ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರು, ‘ವಿಚಾರಣಾ ನ್ಯಾಯಾಲಯ ತನ್ನ ಪ್ರಕ್ರಿಯೆ ಆರಂಭಿಸಲು ಇದೇ 29ರ ದಿನಾಂಕ ನಿಗದಿಗೊಳಿಸಿದೆ. ಇದಕ್ಕೆ ಮಧ್ಯಂತರ ತಡೆ ನೀಡಬೇಕು‘ ಎಂದು ಕೋರಿದರು. ಇದನ್ನು ಸ್ಪಷ್ಟವಾಗಿ ನಿರಾಕರಿಸಿದ ನ್ಯಾಯಪೀಠ, ಪ್ರತಿವಾದಿ ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿತು.

ಇದೇ ವೇಳೆ ಸಿಬಿಐ ಪರ ಹಾಜರಾಗಿದ್ದ ಪಿ.ಪ್ರಸನ್ನ ಕುಮಾರ್, ’ಈ ಪ್ರಕರಣದ ನ್ಯಾಯಿಕ ವಿಚಾರಣೆಯಲ್ಲಿ ಸಿಬಿಐ ಪರವಾದ ವಿಶೇಷ ಪ್ರಾಸಿಕ್ಯೂಟರ್‌ ಆಗಿ ಹಾಜರಾಗಲು ಗಂಗಾಧರ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂಬ ಈ ಮೊದಲಿನ ಅಧಿಸೂಚನೆಯಲ್ಲಿ ಬದಲಾವಣೆ ಮಾಡಲಾಗಿದೆ. ನಾನೇ ಈ ಪ್ರಕರಣದಲ್ಲಿ ಮುಂದುವರಿಯುವಂತೆ ನನಗೆ ಬೆಂಗಳೂರು ವಿಭಾಗದ ಸಿಬಿಐ ಅಧಿಕಾರಿಗಳು ಮುಖ್ತಾರ್‌ ನಾಮೆ ನೀಡಿದ್ದಾರೆ. ಇದನ್ನು ಪರಿಗಣಿಸಿ ಹಾಜರಾಗಲು ಅನುಮತಿಸಬೇಕು‘ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಆದರೆ, ಇದನ್ನು ಒಪ್ಪದ ನ್ಯಾಯಪೀಠ, ‘ಈ ಕುರಿತ ಅಧಿಸೂಚನೆ ಎಲ್ಲಿದೆ‘ ಎಂದು ಕೇಳಿತು. ಅಂತೆಯೇ, ಸಿ.ವಿ.ನಾಗೇಶ್‌ ಅವರೂ ಸಿಬಿಐನ ವಿವರಣೆಯನ್ನು ಬಲವಾಗಿ ಆಕ್ಷೇಪಿಸಿದರು. ‘ಮುಂದಿನ ವಿಚಾರಣೆ ವೇಳೆಗೆ ಈ ಕುರಿತಂತೆ ಹೊಸ ಅಧಿಸೂಚನೆಯನ್ನು ಸಲ್ಲಿಸಿ ಹಾಜರಾಗಿ‘ ಎಂದು ನ್ಯಾಯಪೀಠ ಸಿಬಿಐಗೆ ಆದೇಶಿಸಿತು.

ಪ್ರಕರಣವೇನು?: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಸಿಸಿಎಚ್‌–82ರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 29ರಿಂದ ಫೆಬ್ರುವರಿ 1ರವರೆಗೆ ನಿಯಮಿತವಾಗಿ ವಿಚಾರಣೆ  ಕೈಗೆತ್ತಿಕೊಳ್ಳಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್‌ನಲ್ಲಿ ವಿನಯ ಕುಲಕರ್ಣಿ ಅವರನ್ನು ಬಂಧಿಸಿ, ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT