ಬೆಂಗಳೂರು: ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಸಂಪಂಗಿ ರಾಮನಗರದ ಬಿ.ಲಕ್ಷ್ಮೀ ದೇವಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ವಾದ ಮಂಡಿಸಿ, ‘ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆಯ ಸ್ವರೂಪ ಹೊಂದಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿವೆ. ಈ ಮೂಲಕ ರಿಜ್ವಾನ್ ಅರ್ಷದ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ. ಮತದಾರರಿಗೆ ಆಮಿಷವೊಡ್ಡುವುದು ಲಂಚ ಮತ್ತು ಭ್ರಷ್ಟಚಾರಕ್ಕೆ ಸಮ. ಆದ್ದರಿಂದ ರಿಜ್ವಾನ್ ಅರ್ಷದ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು‘ ಎಂದು ಕೋರಿದರು.
ಪ್ರತಿವಾದಿ ರಿಜ್ವಾನ್ ಅರ್ಷದ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.