ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಕ್ಸೊ: ಕಟ್ಟುನಿಟ್ಟಿನ ಜಾರಿಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

Published 7 ಜೂನ್ 2023, 4:48 IST
Last Updated 7 ಜೂನ್ 2023, 4:48 IST
ಅಕ್ಷರ ಗಾತ್ರ

ಬೆಂಗಳೂರು: ‘ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರಗಳಿಗೆ (ಪೊಲೀಸರಿಗೆ) ದೂರು ನೀಡಲು ಅವಕಾಶ ಕಲ್ಪಿಸುವ ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ–2012ರ ಕಲಂ 19ರ ಕಟ್ಟುನಿಟ್ಟಿನ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು‘ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿಯ ಗರ್ಭಪಾತ ಮಾಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಚಿಕ್ಕಮಗಳೂರಿನ ಡಾ.ಚಂದ್ರಶೇಖರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಈ ಪ್ರಕರಣದಲ್ಲಿ ಸಂತ್ರಸ್ತೆಯ ವಯಸ್ಸು 12 ವರ್ಷ ಎಂಬುದಾಗಿ ನನಗೆ ಗೊತ್ತಾಗಲಿಲ್ಲ. ಆಕೆ ಸೀರೆ ತೊಟ್ಟಿದ್ದಳು. ಆಕೆ ವಯಸ್ಕಳಿರಬಹುದು ಎಂದು ಅಂದಾಜಿಸಿ ಚಿಕಿತ್ಸೆ ನೀಡಿದ್ದೇನೆ ಮತ್ತು ದೂರು ನೀಡಲು ಮುಂದಾಗಲಿಲ್ಲ ಎಂದು ಅರ್ಜಿದಾರರು ತಿಳಿಸಿದ್ದಾರೆ. ಆದರೆ, ಅರ್ಜಿದಾರರು ಸ್ತ್ರೀ ರೋಗ ತಜ್ಞರಾಗಿದ್ದು, 35 ವರ್ಷಗಳ ವೃತ್ತಿ ಅನುಭವ ಹೊಂದಿರುವುದಾಗಿ ತಿಳಿಸಿದ್ದಾರೆ. ಹಲವು ವರ್ಷಗಳ ಕಾಲ ಸರ್ಕಾರಿ ಸೇವೆಯನ್ನೂ ಸಲ್ಲಿಸಿದ್ದೇನೆ ಎಂದಿದ್ದಾರೆ. ಇವರ ವಿರುದ್ಧದ ಆರೋಪ ಗಂಭೀರವಾಗಿದ್ದು, ವಿಚಾರಣೆ ಮುಂದುವರೆಯಬೇಕಿದೆ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

‘ಅಪ್ರಾಪ್ತ ವಯಸ್ಸಿನವರ ವಿರುದ್ಧದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಹೆಚ್ಚು ಜಾಗ್ರತೆ ವಹಿಸಬೇಕು. ಅಂತೆಯೇ, ವೈದ್ಯರು ಪೊಲೀಸರಿಗೆ ತಿಳಿಸುವ ಜವಾಬ್ದಾರಿಯನ್ನೂ ಹೊಂದಿರುತ್ತಾರೆ. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ ಎಂಬ ಮಾಹಿತಿ ಸಿಕ್ಕ ತಕ್ಷಣ ವಿಳಂಬ ಮಾಡದೆ ಸ್ಥಳೀಯ ಪೊಲೀಸರಿಗೆ ತಿಳಿಸಬೇಕು ಎಂದು ಕಲಂ 19 ವಿವರಿಸುತ್ತದೆ. ಈ ಪ್ರಕರಣದಲ್ಲಿ ಅರ್ಜಿದಾರರು ಇಂತಹ ಕ್ರಮಕ್ಕೆ ಮುಂದಾಗದೇ ಇರುವುದು ಗಂಭೀರ ಲೋಪ‘ ಎಂದು ನ್ಯಾಯಪೀಠ ಅರ್ಜಿ ಜಾಗೊಳಿಸಿದೆ.

’ಪೊಕ್ಸೊ ಕಾಯ್ದೆಯ ಕಲಂ 19ರ ಕಟ್ಟುನಿಟ್ಟಿನ ಜಾರಿಯಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇದು ವಿಫಲವಾದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಅಪರಾಧಿಗಳು ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳುತ್ತಾರೆ. ಅಂತಿಮವಾಗಿ ಇದು ಕಾಯ್ದೆಯ ಮೂಲ ಉದ್ದೇಶವನ್ನೇ ವಿಫಲಗೊಳಿಸುತ್ತದೆ ಎಂದು ಸುಪ್ರೀಂಕೋರ್ಟ್ ಹಲವು ಪ್ರಕರಣಗಳಲ್ಲಿ ವಿವರಿಸಿದೆ. ಆದ್ದರಿಂದ, ರಾಜ್ಯ ಸರ್ಕಾರ ಕಲಂ 19 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು‘ ಎಂದು ನ್ಯಾಯಪೀಠ ಸರ್ಕಾರಕ್ಕೆ ತಾಕೀತು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT