ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ ಹೊರುವ ಪದ್ಧತಿ: ಒಂದರಲ್ಲಿ ಮಾತ್ರವೇ ಶಿಕ್ಷೆ– ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

Published 30 ಜನವರಿ 2024, 23:30 IST
Last Updated 30 ಜನವರಿ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಮಲ ಹೊರುವ ಪದ್ಧತಿಯನ್ನು ನಿಷೇಧಿಸಲಾಗಿದ್ದರೂ 1993ರಿಂದ ಇಲ್ಲಿಯವರೆಗೂ ಒಟ್ಟು 47 ಪ್ರಕರಣ ದಾಖಲಾಗಿದ್ದು, 92 ಮಂದಿ ಸಾವನ್ನಪ್ಪಿದ್ದಾರೆ. ವಿಪರ್ಯಾಸವೆಂದರೆ ಈವರೆಗೂ ಒಂದು ಪ್ರಕರಣದಲ್ಲಿ ಮಾತ್ರವೇ ಶಿಕ್ಷೆಯಾಗಿದೆ’ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆಗೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಅನುಪಾಲನಾ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ರಾಜ್ಯ ಸರ್ಕಾರ ಗಣನೀಯ ಪ್ರಮಾಣದಲ್ಲಿ ಕ್ರಮ ಕೈಗೊಂಡಿದೆ. ಆದರೆ, ಪರಿಹಾರದ ವಿಚಾರದಲ್ಲಿ ಇನ್ನಷ್ಟು ಕ್ರಮ ಕೈಗೊಳ್ಳಬೇಕಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ವರದಿಗೆ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.

ವರದಿಯಲ್ಲೇನಿದೆ?:

* ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ ಸಾವನ್ನಪ್ಪಿದ 47 ಪ್ರಕರಣಗಳ ಪೈಕಿ 15 ಪ್ರಕರಣಗಳನ್ನು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಿಕೊಳ್ಳಲಾಗಿದೆ

* ಒಟ್ಟು 47 ಪ್ರಕರಣಗಳಲ್ಲಿ 15 ಪ್ರಕರಣಗಳು ವಿಚಾರಣಾ ಹಂತದಲ್ಲಿದ್ದು, 1 ಪ್ರಕರಣದಲ್ಲಿ ಶಿಕ್ಷೆಯಾಗಿದೆ. 2 ಪ್ರಕರಣಗಳಲ್ಲಿ ವರದಿ ಬಾಕಿ ಇದೆ. 4 ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ

* ಮೃತಪಟ್ಟ ಕಾರ್ಮಿಕರ ಅವಲಂಬಿತರಿಗೆ ನೀಡಲಾಗುವ ಪರಿಹಾರದ ₹10 ಲಕ್ಷ ಮೊತ್ತವನ್ನು ₹30 ಲಕ್ಷಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ

* ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಇಲ್ಲಿಯವರೆಗೆ 1,462 ಫಲಾನುಭವಿಗಳಿಗೆ ₹32.66 ಕೋಟಿ ಪರಿಹಾರ ನೀಡಲಾಗಿದೆ

* ರಾಜ್ಯ ಸರ್ಕಾರ ನಡೆಸಿದ ಸಮೀಕ್ಷೆಯಲ್ಲಿ 7,483 ಶೌಚಗುಂಡಿ ಸ್ವಚ್ಛಗೊಳಿಸುವ ಕಾರ್ಮಿಕರನ್ನು ಗುರುತಿಸಲಾಗಿದ್ದು, ಕೇಂದ್ರ ಸರ್ಕಾರ 1,833 ಕಾರ್ಮಿಕರಿಗೆ ತಲಾ ₹40 ಸಾವಿರ ಪರಿಹಾರ ಧನ ನೀಡಿದೆ. ಉಳಿದ ಕಾರ್ಮಿಕರಿಗೆ ರಾಜ್ಯ ಸರ್ಕಾರ ತಲಾ ₹ 40 ಸಾವಿರ ಪಾವತಿಸಿದೆ

* ಮೃತಪಟ್ಟ ಕಾರ್ಮಿಕರ ಮಕ್ಕಳಿಗೆ ಶಾಲಾ ಸಮವಸ್ತ್ರ ಸ್ಕಾಲರ್‌ಶಿಪ್ ನೀಡುವಂತೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗವು ಸಮಾಜ ಕಲ್ಯಾಣ ಇಲಾಖೆಗೆ ಶಿಫಾರಸು ಮಾಡಿದೆ.

* ರಾಮನಗರ, ಬೆಂಗಳೂರು, ಕಲಬುರಗಿ ಹಾಗೂ ಕೋಲಾರದಲ್ಲಿ ನಡೆದ ಘಟನೆಗಳಲ್ಲಿ ಮೃತ ಕುಟುಂಬದ ಅವಲಂಬಿತ ಸದಸ್ಯರಿಗೆ ಆರ್ಥಿಕ ನೆರವು, ಪರ್ಯಾಯ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT