ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಸಕ ಪೂಂಜಾ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

Published 5 ಜುಲೈ 2024, 15:57 IST
Last Updated 5 ಜುಲೈ 2024, 15:57 IST
ಅಕ್ಷರ ಗಾತ್ರ

ಬೆಂಗಳೂರು: ‘ಪರವಾನಗಿ ಪಡೆಯದೇ ಗಣಿಗಾರಿಕೆ ನಡೆಸಲಾಗುತ್ತಿದೆ’ ಎಂಬ ಆರೋಪದಡಿ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದ ಪೊಲೀಸರ ಕ್ರಮವನ್ನು ಆಕ್ಷೇಪಿಸಿ ಠಾಣೆಗೆ ಧಾವಿಸಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿದ ಹಾಗೂ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಈ ಸಂಬಂಧ ಹರೀಶ್‌ ಪೂಂಜಾ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರು ಶುಕ್ರವಾರ ವಿಚಾರಣೆ ನಡೆಸಿ, ‘ಈ ಸಂಬಂಧ ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಿ’ ಎಂದು ಸೂಚಿಸಿದರು.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೂಂಜಾ ವಿರುದ್ಧ ಪೊಲೀಸರು ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ಕೋರ್ಟ್‌) ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೀಗಾಗಿ, ಆರೋಪಗಳನ್ನು ಕೈ ಬಿಡುವಂತೆ ಕೋರಿ ಅರ್ಜಿದಾರರು ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿದಾರರು ಅರ್ಜಿ ಸಲ್ಲಿಸಲಿ. ನ್ಯಾಯಾಲಯ ಎಂಟು ವಾರಗಳಲ್ಲಿ ಆ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಬಾರದು’ ಎಂದು ಅರ್ಜಿ ಇತ್ಯರ್ಥಪಡಿಸಿತು.

ಪ್ರಕರಣವೇನು?: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದಡಿ ಶಶಿರಾಜ್ ಶೆಟ್ಟಿ ಎಂಬುವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಠಾಣೆಗೆ ಭೇಟಿ ನೀಡಿದ್ದರು. ‘ಹರೀಶ್‌ ಪೂಂಜಾ, ಪೊಲೀಸ್ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಒಡ್ಡಿದ್ದಾರೆ. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ್ದಾರೆ’ ಎಂದು ಆರೋಪಿಸಿ ಪೊಲೀಸರು ಎರಡು ಎಫ್‌ಐಆರ್‌ ದಾಖಲಿಸಿದ್ದರು.

ಇದನ್ನು ಪ್ರಶ್ನಿಸಿ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೆರಿದ್ದರು. ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಪೊಲೀಸರು ಹರೀಶ್‌ ಪೂಂಜಾ ಹಾಗೂ ಇತರ ಆರೋಪಿಗಳ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT