ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಂಕರ್ ನಾಯಕ್‌ ವಿರುದ್ಧ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಕಾರ

Published 15 ಆಗಸ್ಟ್ 2024, 2:24 IST
Last Updated 15 ಆಗಸ್ಟ್ 2024, 2:24 IST
ಅಕ್ಷರ ಗಾತ್ರ

ಬೆಂಗಳೂರು: ₹72 ಲಕ್ಷ ದೋಚಲು ಸುಳ್ಳು ಪ್ರಕರಣ ಸೃಷ್ಟಿಸಿದ್ದ ಆರೋಪದಡಿ ಬಿಡದಿ ಠಾಣೆಯ ಇನ್‌ಸ್ಪೆಕ್ಟರ್ ಶಂಕರ್ ನಾಯಕ್‌ ವಿರುದ್ಧದ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ.

‘ನನ್ನ ವಿರುದ್ಧ 4ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ವಿಚಾರಣೆ ರದ್ದುಗೊಳಿಸಬೇಕು’ ಎಂದು ಕೋರಿ ಶಂಕರ ನಾಯಕ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿದೆ.

ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ ಅವರು ಮಂಡಿಸಿದ, ‘ಶಂಕರ್ ನಾಯಕ್ ಅವರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಕರ್ತವ್ಯ ಲೋಪ, ನಿರ್ಲಕ್ಷ್ಯ ಹಾಗೂ ಉದ್ಧಟತನ ತೋರಿದ್ದಾರೆ’ ಎಂಬ ವಾದವನ್ನು ಪುರಸ್ಕರಿಸಿರುವ ನ್ಯಾಯಪೀಠ, ‘ಶಂಕರ್‌ ನಾಯಕ್‌ ಬೃಹತ್‌ ಮೊತ್ತವನ್ನು ಖಜಾನೆಗೆ ಜಮೆ ಮಾಡದೆ, ತಮ್ಮ ಬಳಿ ಇರಿಸಿಕೊಂಡಿದ್ದಾರೆ. ಹೀಗಾಗಿ, ಪ್ರಕರಣದ ತನಿಖೆ ನಡೆಯಬೇಕು’ ಎಂದು ಆದೇಶದಲ್ಲಿ ವಿವರಿಸಿದೆ.

ಪ್ರಕರಣವೇನು?: ‘ಶಂಕರ್ ನಾಯಕ್‌ ಬ್ಯಾಟರಾಯನಪುರ ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಸಂದರ್ಭದಲ್ಲಿ, ತಮ್ಮ ವ್ಯಾಪ್ತಿಗೆ ಸೇರದ ಸ್ಥಳದಲ್ಲಿ ನಡೆದಿದ್ದ ಕಳ್ಳತನದ ಸಂಬಂಧ ಸುಳ್ಳು ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಯನ್ನು ಬಂಧಿಸಿ ₹72 ಲಕ್ಷ ಜಪ್ತಿ ಮಾಡಿದ್ದರು. ಇದಾದ ನಂತರ, ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದರು. ದೂರುದಾರರಿಗೆ ವಾಪಸು ಕೊಟ್ಟಿರಲಿಲ್ಲ. ಜೊತೆಗೆ, ₹20 ಲಕ್ಷ ಲಂಚಕ್ಕೂ ಬೇಡಿಕೆ ಇಟ್ಟಿದ್ದರು’ ಎಂಬ ಆರೋಪಗಳನ್ನು ಆಧರಿಸಿ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 110, 201, 409,465 ಹಾಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 7ರ ಅಡಿಯಲ್ಲಿನ ಅಪರಾಧಗಳಿಗೆ ವಿಚಾರಣೆ ಎದುರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT