ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲು: ಸರ್ಕಾರಕ್ಕೆ ಹೈಕೋರ್ಟ್‌ ಬರೆ

Published 9 ಏಪ್ರಿಲ್ 2024, 2:56 IST
Last Updated 9 ಏಪ್ರಿಲ್ 2024, 2:56 IST
ಅಕ್ಷರ ಗಾತ್ರ

ಬೆಂಗಳೂರು: ‘ನ್ಯಾಯಾಲಯಗಳ ಆದೇಶ ಪಾಲಿಸಲು ಸರ್ಕಾರ ಮತ್ತು ಸಕ್ಷಮ ಪ್ರಾಧಿಕಾರಗಳು ಅಸೀಮ ನಿರ್ಲಕ್ಷ್ಯ ತೋರುತ್ತಿವೆ ಹಾಗೂ ವಿಳಂಬಧೋರಣೆ ಅನುಸರಿಸುತ್ತಿವೆ’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಈ ಕುರಿತಂತೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

ಈ ಸಂಬಂಧ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಅರ್ಜಿ ದಾಖಲಿಸಿಕೊಂಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಕರ್ನಾಟಕ ಕೈಗಾರಿಕಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಕ್ಷಮ ಪ್ರಾಧಿಕಾರಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

‘ನ್ಯಾಯಾಲಯದ ಆದೇಶಗಳನ್ನು ನಿರ್ಲಕ್ಷಿಸುತ್ತಿರುವ ಕಾರಣ ವ್ಯವಸ್ಥೆ ದುರ್ಬಲಗೊಂಡಿದೆ. ನ್ಯಾಯಾಲಯಗಳು ತಮ್ಮ ಅಧಿಕಾರ ಕಳೆದುಕೊಳ್ಳುತ್ತಿವೆ. ಕೋರ್ಟ್‌ ಆದೇಶಗಳು ಸರ್ಕಾರಿ ಅಧಿಕಾರಿಗಳ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ ಎಂಬುದು ಇದನ್ನು ನೋಡಿದರೆ ವೇದ್ಯವಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿರುವ ನ್ಯಾಯಪೀಠ, ‘ನ್ಯಾಯಾಲಯದ ಆದೇಶಗಳನ್ನು ಪಾಲಿಸದೇ ಇರುವ ಸರ್ಕಾರದ ಎಲ್ಲಾ ಇಲಾಖೆಗಳನ್ನು ಪ್ರತಿವಾದಿಗಳಾಗಿ ಮಾಡಬೇಕು’ ಎಂದು ರಿಜಿಸ್ಟ್ರಾರ್ ಅವರಿಗೆ ಸೂಚಿಸಿದೆ.

‘ಕೋರ್ಟ್ ಆದೇಶಗಳನ್ನು ಪಾಲಿಸಲು ಸರ್ಕಾರ ಹಾಗೂ ಸಕ್ಷಮ ಪ್ರಾಧಿಕಾರಗಳು ಯಾವ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳಬೇಕು? ಆದೇಶ ಪಾಲನೆ ವಿಚಾರಗಳನ್ನು ನಿರ್ವಹಿಸಲು ವಿಶೇಷ ಶಾಖೆ, ಸಕ್ಷಮ ಅಧಿಕಾರಿಗಳನ್ನು ನೇಮಿಸಲಾಗಿದೆಯೇ? ಇದಕ್ಕಾಗಿ ಯಾವುದಾದರೂ ವ್ಯವಸ್ಥೆ ರೂಪಿಸಲಾಗಿದೆಯೇ? ಕೋರ್ಟ್‌ ಆದೇಶಗಳನ್ನು ಜಾರಿಗೊಳಿಸಲು, ಅದನ್ನು ಮೇಲ್ವಿಚಾರಣೆ ನಡೆಸಲು ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದೆ? ಕೋರ್ಟ್‌ ಆದೇಶಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ವ್ಯವಸ್ಥೆ ರೂಪಿಸಲಾಗಿದೆಯೇ? ಈತನಕ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮಗಳೇನು? ಎಂಬುದರ ಬಗ್ಗೆ ಸರ್ಕಾರ ಮತ್ತು ಅರೆ-ಸರ್ಕಾರಿ ಸಂಸ್ಥೆಗಳು ಉತ್ತರ ನೀಡಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ. ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಲಾಗಿದೆ.

‘ಮೂಲಭೂತ ಹಕ್ಕಿನ ಉಲ್ಲಂಘನೆ’

‘ನ್ಯಾಯಾಲಯಗಳ ಮೊರೆ ಹೋಗುವುದು ಸಾರ್ವಜನಿಕರ ಮೂಲಭೂತ ಹಕ್ಕು. ಆದರೆ ಕೋರ್ಟ್ ನೀಡಿದ ಆದೇಶಗಳನ್ನು ಅಧಿಕಾರಿಗಳು ಪಾಲಿಸದೇ ಇರುವುದು ಸಾರ್ವಜನಿಕರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ’ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ ‘ನ್ಯಾಯಾಲಯಗಳ ಆದೇಶ ಪಾಲಿಸಲು ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷವನ್ನು ಸಹಿಸಲಾಗದು. ಕೋರ್ಟ್‌ ಆದೇಶ ಜಾರಿಯ ವಿಳಂಬದಿಂದ ನ್ಯಾಯ ವಂಚಿಸಿದಂತಾಗಲಿದೆ’ ಎಂದು ಹೇಳಿದೆ.

ನ್ಯಾಯಾಲಯದ ಆದೇಶಗಳು ಪಾಲನೆಯಾಗದೇ ಇರುವುದಕ್ಕೆ ಸರ್ಕಾರದ ಜೊತೆಗೆ ಸಕ್ಷಮ ಪ್ರಾಧಿಕಾರಗಳು ಶಾಸನಾತ್ಮಕ ಸಂಸ್ಥೆಗಳು ಹಾಗೂ ಮಹಾನಗರ ಪಾಲಿಕೆಗಳೂ ಸಮಾನ ಜವಾಬ್ದಾರಿ ಹೊಂದಿವೆ.
-ಎನ್‌.ವಿ.ಅಂಜಾರಿಯಾ, ಮುಖ್ಯ ನ್ಯಾಯಮೂರ್ತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT