ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಡಿ.ಕೆ.ಶಿವಕುಮಾರ್ ಅರ್ಜಿ ವಿಚಾರಣೆ 29ಕ್ಕೆ ನಿಗದಿ

Published 22 ನವೆಂಬರ್ 2023, 16:30 IST
Last Updated 22 ನವೆಂಬರ್ 2023, 16:30 IST
ಅಕ್ಷರ ಗಾತ್ರ

ಬೆಂಗಳೂರು: ‘ಆದಾಯ ಮೀರಿದ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಿದ್ದ ಈ ಹಿಂದಿನ ಸರ್ಕಾರದ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ಇದೇ 29ಕ್ಕೆ ನಿಗದಿಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಅರ್ಜಿ ವಿಚಾರಣೆಗೆ ನಿಗದಿಯಾಗಿತ್ತು. ಬುಧವಾರ ಬೆಳಗಿನ ಕಲಾಪ ಆರಂಭವಾಗುತ್ತಿದ್ದಂತೆ ಸಿಬಿಐ ಪರ ಕೇಂದ್ರ ಸರ್ಕಾರದ ಸಹಾಯಕ ಸಾಲಿಸಿಟರ್‌ ಜನರಲ್‌ ಸೂರ್ಯಪ್ರಕಾಶ್‌ ವಿ.ರಾಜು ಹಾಜರಾಗಿ, ಸಿಬಿಐ ವಾದ ಮಂಡನೆಗೆ ಇದೇ 27 ರಂದು ದಿನಾಂಕ ನಿಗದಿಪಡಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಇಂದು (ಬುಧವಾರ) ಮಧ್ಯಾಹ್ನ ಮೇಲ್ಮನವಿದಾರರ ಪರ ವಕೀಲರ ವಾದ ಆಲಿಸಲಾಗುವುದು. ನಂತರ ಸಿಬಿಐ ವಾದ ಆಲಿಸಲು ಸೂಕ್ತ ದಿನಾಂಕ ನಿಗದಿಪಡಿಸಲಾಗುವುದು ಎಂದು ತಿಳಿಸಿ, ಮಧ್ಯಾಹ್ನಕ್ಕೆ ವಿಚಾರಣೆ ನಿಗದಿಪಡಿಸಿತು. ಆದರೆ, ಮಧ್ಯಾಹ್ನದ ಕಲಾಪದ ವೇಳೆ ಸಿಬಿಐ ಮತ್ತು ಮೇಲ್ಮನವಿದಾರರ ಪರ ವಕೀಲರು ಹಾಜರಾಗಿ, ವಾದ ಮಂಡನೆಗೆ ಇನ್ನಷ್ಟು ಕಾಲಾವಕಾಶ ನೀಡುವಂತೆ ಜಂಟಿ ಮನವಿ ಸಲ್ಲಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಇದೇ 29 ಕ್ಕೆ ವಿಚಾರಣೆ ಮುಂದೂಡಿತು.

‘ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿ 2021 ರ ಸೆಪ್ಟೆಂಬರ್ 25ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ಶಿವಕುಮಾರ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠವು 2023ರ ಏಪ್ರಿಲ್‌ನಲ್ಲಿ ವಜಾಗೊಳಿಸಿತ್ತು.

ಇದನ್ನು ಪ್ರಶ್ನಿಸಿ ಶಿವಕುಮಾರ್‌ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶ ಮತ್ತು ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿತ್ತು.

ಇದಕ್ಕೆ ಪ್ರತಿಯಾಗಿ ಸಿಬಿಐ; ತನಿಖೆಗೆ ನೀಡಿರುವ ತಡೆ ತೆರವುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ‘ತನಿಖೆಗೆ ನೀಡಿರುವ ತಡೆ ತೆರವು ಕೋರಿ ಸಿಬಿಐ ಸಲ್ಲಿಸಿರುವ ಮಧ್ಯಂತರ ಅರ್ಜಿ ಹಾಗೂ ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಮೇಲ್ಮನವಿಯನ್ನು ಎರಡು ವಾರಗಳಲ್ಲಿ ಇತ್ಯರ್ಥಪಡಿಸಿ‘ ಎಂದು ಹೈಕೋರ್ಟ್‌ಗೆ ನಿರ್ದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT