ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ: ಇಂದು ನಿರ್ಧಾರ

Published 13 ಜೂನ್ 2024, 0:00 IST
Last Updated 13 ಜೂನ್ 2024, 0:00 IST
ಅಕ್ಷರ ಗಾತ್ರ

ಬೆಂಗಳೂರು: ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಗಡುವು ವಿಸ್ತರಿಸಲು ಹೈಕೋರ್ಟ್‌ ಅನುಮತಿ ನೀಡಿದ್ದು, ಈ ಬಗ್ಗೆ ಜೂನ್‌ 13ರಂದು ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

‘ಎಷ್ಟು ದಿನ ವಿಸ್ತರಿಸಬೇಕು. ಗಡುವು ಮುಗಿದ ಮೇಲೆ ಯಾವ ಕ್ರಮ ಕೈಗೊಳ್ಳಬೇಕು ಎಂದು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

2019ರ ಏಪ್ರಿಲ್‌ 1ಕ್ಕಿಂತ ಹಿಂದಿನ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕಿದ್ದು, ರಾಜ್ಯದಲ್ಲಿ 2 ಕೋಟಿ ವಾಹನಗಳಿವೆ. ಅದರಲ್ಲಿ ಇಲ್ಲಿವರೆಗೆ 40 ಲಕ್ಷ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ.

ಹೈಕೋರ್ಟ್‌ ಅನುಮತಿ: ರಾಜ್ಯದಲ್ಲಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ (ಹೈಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್) ಅಳವಡಿಸುವ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಅನುಮತಿ ನೀಡಿದೆ.

‘ಎಚ್ಎಸ್ಆರ್‌ಪಿ ಅಳವಡಿಕೆಗೆ ವಿಧಿಸಿರುವ ಗಡುವು ವಿಸ್ತರಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಬಿಎನ್‌ಡಿ ಎನರ್ಜಿ ಪ್ರೈವೇಟ್‌ ಲಿಮಿಟೆಡ್ ಕಂಪನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಆದಿತ್ಯ ಸೋಂಧಿ ಈ ಸಂಬಂಧ ಸಲ್ಲಿಸಿದ ಕೋರಿಕೆಯನ್ನು ಸಮ್ಮತಿಸಿದ ನ್ಯಾಯಪೀಠವು ಎಚ್ಎಸ್ಆರ್‌ಪಿ ಅಳವಡಿಕೆಗೆ ವಿಧಿಸಿದ್ದ ಗಡುವು ವಿಸ್ತರಿಸಲು ಅನುಮತಿಸಿ ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT