ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಥಿಲ ಮನೆ ಗುರುತಿಸಿ, ಅಪಾಯ ತಪ್ಪಿಸಿ: ಸಿದ್ದರಾಮಯ್ಯ ಸೂಚನೆ

Published 16 ಆಗಸ್ಟ್ 2024, 15:33 IST
Last Updated 16 ಆಗಸ್ಟ್ 2024, 15:33 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಶಿಥಿಲವಾದ ಮನೆಗಳನ್ನು ಗ್ರಾಮ ಮಟ್ಟದಲ್ಲೇ ಗುರುತಿಸಬೇಕು. ಅಂಗನವಾಡಿ, ಶಾಲಾ ಕಟ್ಟಡಗಳು, ಸೇತುವೆಗಳು ಮತ್ತು ಕೆರೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಶುಕ್ರವಾರ ನಡೆದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮನೆ ಕುಸಿತ, ನೀರಿನಲ್ಲಿ ಕೊಚ್ಚಿ ಹೋಗುವ ಪ್ರಕರಣಗಳಲ್ಲಿ ಸಾವು– ನೋವು ತಪ್ಪಿಸಲು ಸಾಧ್ಯವಿದೆ. ಆ ಬಗ್ಗೆ ಮುತುವರ್ಜಿ ವಹಿಸಬೇಕು ಎಂದು ಹೇಳಿದರು.

‘ಮಲೆನಾಡು, ಕರಾವಳಿ ಭಾಗಗಳಲ್ಲಿ ಇರುವ ಹಳೇ ಶಾಲಾ ಕಟ್ಟಡಗಳನ್ನು ಗುರುತಿಸಿ, ಕ್ರಿಯಾ ಯೋಜನೆಯಲ್ಲಿ ಆದ್ಯತೆ ಮೇರೆಗೆ ದುರಸ್ತಿಪಡಿಸಬೇಕು. ಪಂಚಾಯತ್‌ ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗಿದೆ. ₹20 ಸಾವಿರ ಅನುದಾನ ಒದಗಿಸಲಾಗಿದೆ. ಸಾವು– ನೋವು ತಪ್ಪಿಸುವುದು ನಮ್ಮ ಆದ್ಯತೆ. ಗ್ರಾಮ ಪಂಚಾಯತ್‌ ಕಾರ್ಯಪಡೆ ಬಲಪಡಿಸಲು ಕ್ರಮಕೈಗೊಳ್ಳಬೇಕು’ ಎಂದರು.

‘ರಾಜ್ಯದಲ್ಲಿ ಮನೆಗಳ ಕುಸಿತದಿಂದ 29 ಸಾವು ಸಂಭವಿಸಿದ್ದು, ನಗರ ಮತ್ತು ಗ್ರಾಮ ಪ್ರದೇಶಗಳಲ್ಲಿ ಶಿಥಿಲಗೊಂಡ ಮನೆಗಳಲ್ಲಿರುವವರನ್ನು ಖಾಲಿ ಮಾಡಿ, ಅವರಿಗೆ ಪುನರ್‌ವಸತಿ ಕಲ್ಪಿಸಬೇಕು’ ಎಂದೂ ಸಿದ್ದರಾಮಯ್ಯ ಸೂಚಿಸಿದರು.

‘ಸೇತುವೆಗಳ ಸುಸ್ಥಿತಿ ಬಗ್ಗೆ ಲೋಕೋಪಯೋಗಿ ಇಲಾಖೆಯಿಂದ ವರದಿಯನ್ನು ಪಡೆಯಬೇಕು. ಸಂಪರ್ಕ ರಸ್ತೆಗಳು ಕುಸಿದಿದ್ದರೆ ಅವುಗಳನ್ನು ಸರಿಪಡಿಸಿ, ವಾಹನಗಳ ಸಂಚಾರಕ್ಕೆ ಸುಗಮಗೊಳಿಸಬೇಕು. ಎಲ್ಲಾ ಸೇತುವೆ, ರಸ್ತೆಗಳನ್ನು ನಿರಂತರವಾಗಿ ಪರಿಶೀಲನೆ ನಡೆಸಿ ಯಾವುದೇ ಅನಾಹುತ ಆಗದಂತೆ ಎಚ್ಚರಿಕೆ ವಹಿಸಬೇಕು. ಮುಳುಗು ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಬೇಕು. ಯಾವುದೇ ಕಾರಣಕ್ಕೂ ವಾಹನ ಸಂಚರಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.

‘ಪ್ರವಾಹ, ಭಾರಿ ಮಳೆ ಸಂದರ್ಭದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡರೆ, ಕೂಡಲೇ ಸರಿಪಡಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಅಗತ್ಯವಿರುವ ಟ್ರಾನ್ಸ್‌ಫಾರ್ಮರ್‌ಗಳು, ಕಂಬಗಳು ಸುಲಭವಾಗಿ ಸಿಗುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದೂ ಸೂಚನೆ ನೀಡಿದರು.

ಕೆರೆಗಳನ್ನು ತುಂಬಿಸಿ: ಸಿಎಂ

ರಾಜ್ಯ ಜಲಾಶಯಗಳು ಶೇ 89 ರಷ್ಟು ಭರ್ತಿ ಆಗಿದ್ದು ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇನ್ನು ಮುಂದೆಯೂ ಉತ್ತಮ ಮಳೆ ಆಗುವ ಸಾಧ್ಯತೆ ಇರುವುದರಿಂದ ವಿವಿಧ ಏತ ನೀರಾವರಿ ಯೋಜನೆಗಳಡಿ ಎಲ್ಲೆಲ್ಲಿ ಅವಕಾಶವಿದೆಯೋ ಅಲ್ಲೆಲ್ಲ ಕೆರೆಗಳಿಗೆ ನೀರು ತುಂಬಿಸಬೇಕು. ಆ ಮೂಲಕ ಅಂತರ್ಜಲ ಮಟ್ಟ ಹೆಚ್ಚಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಲಿ ಎಂದು ಹೇಳಿದರು. ಮಳೆ ಮುನ್ಸೂಚನೆ ಆಧರಿಸಿ ಮುಂಚಿತವಾಗಿಯೇ ಸೂಕ್ತ ಪ್ರಮಾಣದ ನೀರನ್ನು ಜಲಾಶಯಗಳಿಂದ ಹೊರಗೆ ಬಿಡುವ ಮೂಲಕ ಮಳೆಯಾದಾಗ ಜಲಾಶಯಗಳಲ್ಲಿ ಏಕಾಏಕಿ ನೀರಿನ ಸಂಗ್ರಹ ಹೆಚ್ಚಾಗಿ ಪ್ರವಾಹ ಉಂಟಾಗುವುದನ್ನು ತಡೆಗಟ್ಟಲು ನಿರ್ದೇಶನ ನೀಡಿದರು.

‘ರಾಜಕಾಲುವೆ ಒತ್ತುವರಿ ತೆರವು ಮಾಡಿ’ ‘ಬೆಂಗಳೂರು ನಗರದಲ್ಲಿ ಪ್ರವಾಹನಿಯಂತ್ರಣ ಕೊಠಡಿ ಆರಂಭಿಸಲಾಗಿದೆ. ದೊಡ್ಡ ಚರಂಡಿಗಳು ತೆರೆದಿರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್‌ ಮಾಡಲಾಗಿದೆ. ಇದರಿಂದ ಈ ಬಾರಿ ಯಾವುದೇ ಸಾವು ನೋವು ಸಂಭವಿಸಿಲ್ಲ’ ಎಂದು ಸಭೆಯಲ್ಲಿ ಅಧಿಕಾರಿಗಳು ತಿಳಿಸಿದರು.

‘ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಕೆರೆಗಳ ಕೋಡಿಗಳಿಗೆ ಗೇಟ್‌ ಅಳವಡಿಸುವ ಮೂಲಕ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ ತಡೆಗಟ್ಟಬೇಕು. ಪ್ರತಿ ದಿನ ನಗರದ ಪರಿಸ್ಥಿತಿ ಕುರಿತು ಸಭೆ ನಡೆಸಿ ಪರಿಶೀಲನೆ ನಡೆಸಬೇಕು’ ಎಂದು ಸಿದ್ದರಾಮಯ್ಯ ಅವರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದರು. ‘ಮಳೆಯ ಸಂದರ್ಭದಲ್ಲಿ ಬಿಡಿಎ ಜಲಮಂಡಳಿ ಬಿಎಂಆರ್‌ಸಿಎಲ್‌ ಬಿಬಿಎಂಪಿ ಎಲ್ಲವೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT