ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜ್ವಲ್ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಿ: ಎಚ್.ಡಿ. ದೇವೇಗೌಡ

ಪ್ರಜ್ವಲ್ ರೇವಣ್ಣ ತಪ್ಪು ಮಾಡಿರುವುದು ಸಾಬೀತಾದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು
Published 18 ಮೇ 2024, 7:54 IST
Last Updated 18 ಮೇ 2024, 7:54 IST
ಅಕ್ಷರ ಗಾತ್ರ

ಬೆಂಗಳೂರು: 'ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಪ್ಪು ಮಾಡಿರುವುದು ಸಾಬೀತಾದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ' ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

ತಮ್ಮ 92ನೇ ಜನ್ಮ‌ದಿನವಾದ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಮೊಮ್ಮಗ ಪ್ರಜ್ವಲ್ ರೇವಣ್ಣ ಮತ್ತು ಮಗ ಎಚ್.ಡಿ. ರೇವಣ್ಣ ವಿರುದ್ಧದ ಆರೋಪಗಳ ಕುರಿತು ಇದೇ ಮೊದಲ ಬಾರಿಗೆ ಅವರು ಪ್ರತಿಕ್ರಿಯಿಸಿದ್ದಾರೆ.

'ಪ್ರಜ್ವಲ್ ವಿರುದ್ಧದ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ. ಆತ ತಪ್ಪು ಮಾಡಿದ್ದಾನೆ ಎಂದು ತನಿಖೆಯಲ್ಲಿ ಸಾಬೀತಾದರೆ ಸರ್ಕಾರ ಕ್ರಮ ಜರುಗಿಸಲಿ' ಎಂದರು.

'ಎಚ್.ಡಿ.‌ರೇವಣ್ಣ ವಿರುದ್ಧದ ಪ್ರಕರಣವನ್ನು ಸೃಷ್ಟಿಸಲಾಗಿದೆ. ಅದರ ಹಿಂದೆ ಯಾರಿದ್ದಾರೆ ಎಂಬುದನ್ನು ಈಗ‌ ಮಾತನಾಡುವುದಿಲ್ಲ. ಒಂದು ಪ್ರಕರಣದಲ್ಲಿ ರೇವಣ್ಣ ಅವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಮತ್ತೊಂದು ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆ ಪ್ರಗತಿಯಲ್ಲಿದೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ. ಆ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಹಲವರಿದ್ದಾರೆ. ಎಲ್ಲರಿಗೂ ಶಿಕ್ಷೆ ಆಗಬೇಕು. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರಕಬೇಕು' ಎಂದರು.

ಆ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ' ಎಂದು ಹೇಳಿದರು.

'ಈ ಪ್ರಕರಣದ ಹಿಂದೆ ಯಾರಿದ್ದಾರೆ? ಅವರ ವಿರುದ್ಧ ಏನು ಕ್ರಮ ಕೈಗೊಳ್ಳುತ್ತೇವೆ? ಎಂಬುದರ ಕುರಿತು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಎಚ್.ಡಿ. ಕುಮಾರಸ್ವಾಮಿ ಮಾತನಾಡುತ್ತಾರೆ. ಅವರು ಈಗಾಗಲೇ ಮಾತನಾಡಿದ್ದಾರೆ. ಮುಂದೆಯೂ ಅವರೇ ಸ್ಪಷ್ಟ ನಿಲುವನ್ನು ಪ್ರಕಟಿಸುತ್ತಾರೆ' ಎಂದು ತಿಳಿಸಿದರು.

ಪ್ರಜ್ವಲ್ ಪ್ರಕರಣದ ಪೆನ್ ಡ್ರೈವ್ ವಿತರಣೆ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈವಾಡವಿದೆ ಎಂಬ ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ದೇವೇಗೌಡ, 'ಮಾಧ್ಯಮಗಳ ಮೂಲಕ ಈ ಕುರಿತು ತಿಳಿಯಿತು. ಆ ಬಗ್ಗೆಯೂ ಕುಮಾರಸ್ವಾಮಿ ಅವರೇ ಹೇಳುತ್ತಾರೆ. ಮುಂದಿನ ನಡೆಯ ಕುರಿತು ಅವರೇ ಪ್ರಕಟಿಸುತ್ತಾರೆ' ಎಂದರು.

'ನಾನು ಲೋಕಸಭಾ ಚುನಾವಣೆಯಲ್ಲಿ ಪ್ರಚಾ ರ‌ಮಾಡಿದ್ದೇನೆ. ಜೂನ್ 4ರ ನಂತರ ನಿಮ್ಮನ್ನು ಭೇಟಿಯಾಗುವೆ' ಎಂದ ಅವರು, ತಮ್ಮ ಮನೆಯ ಬಳಿಯಿಂದ‌ ನಿರ್ಗಮಿಸುವಂತೆ ಮಾಧ್ಯಮ ಪ್ರತಿನಿಧಿಗಳಿಗೆ ಮನವಿ‌ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT