ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Cauvery Issue: ನೀರು ಬಿಡದಿದ್ದರೆ ಜಲಾಶಯ ವಶಕ್ಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ತಜ್ಞರ ಜತೆ ಚರ್ಚೆ ಬಳಿಕ ತೀರ್ಮಾನ’: ಮುಂಖ್ಯಮಂತ್ರಿ ಸಿದ್ದರಾಮಯ್ಯ
Published 29 ಸೆಪ್ಟೆಂಬರ್ 2023, 10:28 IST
Last Updated 29 ಸೆಪ್ಟೆಂಬರ್ 2023, 10:28 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾವೇರಿ ನೀರು ವಿವಾದ ಕುರಿತು ಇಂದು ಸಂಜೆ (ಶುಕ್ರವಾರ) ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.

ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹಾಗೂ ‘ಮುಖ್ಯಮಂತ್ರಿ’ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದ ಭೇಟಿ ನಂತರ ಮುಖ್ಯಮಂತ್ರಿ ಮಾತನಾಡಿದರು.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿದೆ. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿಎಂಸಿ ಅಡಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶ ಇದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ಅಡಿ ನೀರು ಅಗತ್ಯ ಇದೆ. ಸುಪ್ರೀಂ ಕೋರ್ಟ್‌ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ ಎಂದು ವಿವರಿಸಿದರು.

‘ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್‌ಗಳ ಜತೆಗೆ ಇಂದು ಸಂಜೆ ಸಭೆ ಕರೆಯಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ನೀರು ಕೊಡಬಾರದೆಂದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು. ನ್ಯಾಯಾಂಗ ನಿಂದನೆ ಆಗುತ್ತದೆ. ಸರ್ಕಾರವನ್ನು ವಜಾ ಮಾಡಬಹುದು’ ಎಂದು ಹೇಳಿದರು.

ಕುರುಬೂರು ಶಾಂತಕುಮಾರ್ ಮಾತನಾಡಿ, ಕರ್ನಾಟಕದ ಜನರಿಗೆ ಪೆಟ್ಟು ಬೀಳುವ ಆದೇಶ ಬೀಳುತ್ತಿದೆ. ಜನ ಆತಂಕಗೊಂಡಿದ್ದಾರೆ. ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಆಮ್‌ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಮಾತನಾಡಿ, ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಪ್ರಾಧಿಕಾರದ ತೀರ್ಪು ಅವೈಜ್ಞಾನಿಕವಾಗಿದೆ. ಲೋಪ ಎಲ್ಲಿ ಆಗಿದೆಯೆಂದು ಸ್ಪಷ್ಟಪಡಿಸಬೇಕು ಎಂದು ಹೇಳಿದರು.

ರಾಜ್ಯಕ್ಕೆ 106 ಟಿಎಂಸಿ ಅಡಿ ನೀರು ಅಗತ್ಯ: ಸಿ.ಎಂ

ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ಅಡಿ ನೀರು ನೀರಾವರಿಗೆ ಅಗತ್ಯವಿದೆ. 30 ಟಿಎಂಸಿ ಕುಡಿಯುವ ನೀರಿಗೆ ಅಗತ್ಯ. ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯ. ಒಟ್ಟು 106 ಟಿಎಂಸಿ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ, ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ವರ್ಷ ಆಗಸ್ಟ್‌ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಹೆಚ್ಚಾಗಿದೆ. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ, ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂ ಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT