ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಭ್ರೂಣ ಹತ್ಯೆ ಆರೋಪ: ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

Published 2 ಮೇ 2024, 16:05 IST
Last Updated 2 ಮೇ 2024, 16:05 IST
ಅಕ್ಷರ ಗಾತ್ರ

ಬೆಂಗಳೂರು: ಭಾರಿ ಸಂಖ್ಯೆಯಲ್ಲಿ ಅಕ್ರಮವಾಗಿ ಭ್ರೂಣ ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ನೆಲಮಂಗಲದ ‘ಆಸರೆ’ ಆಸ್ಪತ್ರೆ ವೈದ್ಯ ಡಾ.ಎನ್‌.ಕೆ. ರವಿಕುಮಾರ್ ವಿರುದ್ಧದ ಕ್ರಿಮಿನಲ್‌ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಈ ಸಂಬಂಧ ಎನ್.ಕೆ.ರವಿಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದ ವಕೀಲೆ ಕೆ.ಪಿ.ಯಶೋದಾ, ‘ರಾಜ್ಯದಾದ್ಯಂತ ವಿವಿಧೆಡೆ ಇಂತಹ ಕಾನೂನುಬಾಹಿರ ಕೃತ್ಯಗಳು ನಡೆದಿರುವ ಶಂಕೆಯಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕಿದೆ. ಅಂತೆಯೇ, ಅರ್ಜಿದಾರರ ಮಾಲೀಕತ್ವದ ಆಸ್ಪತ್ರೆಯಲ್ಲಿ ಸುಮಾರು 74 ಗರ್ಭಪಾತ ನಡೆಸಲಾಗಿದೆ ಎಂಬುದು ತನಿಖೆ ವೇಳೆ ಬಯಲಾಗಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

ಇದನ್ನು ಮಾನ್ಯ ಮಾಡಿರುವ ನ್ಯಾಯಪೀಠ, ‘ಪ್ರಕರಣ ತನಿಖಾ ಹಂತದಲ್ಲಿದ್ದು, ಅರ್ಜಿದಾರರ ವಿರುದ್ಧದ ಆರೋಪಗಳು ಜೀವಾವಧಿ ಶಿಕ್ಷೆಗೆ ಒಳಗಾಗುವಂತಹದ್ದು. ಹಾಗಾಗಿ, ಈ ಹಂತದಲ್ಲಿ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ’ ಎಂದು ತಿಳಿಸಿದೆ.

ಕೋರಿಕೆ ಏನಿತ್ತು?: ‘ನನ್ನ ವಿರುದ್ಧ ನೆಲಮಂಗಲ ಟೌನ್‌ ಪೊಲೀಸ್ ಠಾಣೆಯಲ್ಲಿ; ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 312, 313, 315 ಹಾಗೂ 316 ಮತ್ತು ವೈದ್ಯಕೀಯ ಗರ್ಭಪಾತ ಕಾಯ್ದೆ–1971ರ ಕಲಂ 5 (ಬಿ), 5(1)(2) ಮತ್ತು (3)ರ ಅನ್ವಯ ದಾಖಲಾಗಿರುವ ದೂರು ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT