ಮಂಗಳೂರು: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಮೀನುಗಾರಿಕೆ ಸಚಿವ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಭಾಷಣ ನಡುವೆ ಅವರು ಕರ್ನಾಟಕದ ಮುಖ್ಯಮಂತ್ರಿ ಹೆಸರನ್ನು ಉಲ್ಲೇಖಿಸುವಾಗ ಬಸವರಾಜ ಬೊಮ್ಮಾಯಿ ಬದಲಾಗಿ 'ಎಸ್.ಆರ್. ಬೊಮ್ಮಾಯಿ' ನೇತೃತ್ವದಲ್ಲಿ ನಮ್ಮ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯದ ಜತೆಗೆ ಆರ್ಥಿಕ- ಸಾಮಾಜಿಕ ಚಟುವಟಿಕೆಗೆ ಚೈತನ್ಯ ತುಂಬಿದೆ ಎಂದು ಹೇಳಿದರು.

ಸಚಿವರಿಗೆ ನೀಡಿದ್ದ ಸಿದ್ಧ ಭಾಷಣದ ಪ್ರತಿಯಲ್ಲಿ ಈ ಪ್ರಮಾದವಾಗಿತ್ತು. ಸಚಿವರು ಅದನ್ನೇ ಓದಿದರು.

ಬೆಂಗಳೂರು: 'ರಾಜ್ಯದ ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ಯಾರೊಂದಿಗೂ ನಾನು ರಾಜಿ ಆಗುವುದಿಲ್ಲ. ಮೇಕೆದಾಟು ಯೋಜನೆಯನ್ನು ಅನುಷ್ಠಾನಕ್ಕೆ ತರುವುದು ಖಚಿತ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿವರ: ಮೇಕೆದಾಟು ಯೋಜನೆ ಅನುಷ್ಠಾನ ಖಚಿತ: ಸಿಎಂ ಬೊಮ್ಮಾಯಿ

ವಿಜಯಪುರ: ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಸ್ವಾತಂತ್ಸೋವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ಆಗಮಿಸುತ್ತಿದ್ದ ವೇಳೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಅಡ್ಡಗಟ್ಟಿ ಘೇರಾವ್ ಹಾಕಿದರು.

ವಿಜಯಪುರ ಜಿಲ್ಲೆಗೆ ಭ್ರಷ್ಟ ಸಚಿವೆ ಬೇಡ, ಧ್ವಜಾರೋಹಣ ಮಾಡುವುದು ಬೇಡ ಎಂದು ಘೋಷಣೆ ಕೂಗಿ, ಕಪ್ಪು ಬಟ್ಟೆ ಪ್ರದರ್ಶಿಸಿದರು. ಪ್ರತಿಭಟನಾಕಾರರನ್ನು ಪೊಲೀಸರು ತಡೆದು, ವಶಕ್ಕೆ ಪಡೆದರು.

ಬಾಗಲಕೋಟೆ: ಇಲ್ಲಿನ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮುಂಜಾನೆ ಜಿಲ್ಲಾ ಉಸ್ತುವಾರಿಯೂ ಆದ ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ರಾಷ್ಟಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಪಥಸಂಚಲನದಲ್ಲಿ ಬಿಳಿ ಷರ್ಟ್ ಹಾಗೂ ಕಪ್ಪು ಪ್ಯಾಂಟ್ ನೊಂದಿಗೆ ಪಾಲ್ಗೊಂಡಿದ್ದ ಜಿಲ್ಲೆಯ ಮಾಜಿ ಸೈನಿಕರ ತಂಡ ಗಮನ ಸೆಳೆಯಿತು.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮಾಜಿ ಸೈನಿಕರ ತಂಡ ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.

ಕಲಬುರ್ಗಿ: ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 2.68 ಲಕ್ಷ ರೈತರಿಗೆ ₹ 517.38 ಕೋಟಿ ಆರ್ಥಿಕ ನೆರವು ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

ಹೊಸಪೇಟೆ (ವಿಜಯನಗರ): 'ಮುಹೂರ್ತ ನೋಡಿ ಖಾತೆ ಸ್ವೀಕರಿಸುವೆ. ದೇವರ ಮುಹೂರ್ತ, ನನ್ನ ನಕ್ಷತ್ರ ನೋಡಿಕೊಂಡು ಖಾತೆ ಸ್ವೀಕರಿಸುತ್ತೇನೆ' ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.

ಭಾನುವಾರ ನಗರದ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ರಾಯಚೂರು: ರಾಯಚೂರು ನಗರಕ್ಕೆ ವರ್ತುಲ ರಸ್ತೆ ನಿರ್ಮಾಣಕ್ಕೆ ಬಜೆಟ್ ಮೂಲಕ ರಾಜ್ಯ ಸರ್ಕಾರ ₹80 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು. ಜಿಲ್ಲಾ ಪೊಲೀಸ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಾರವಾರ: 'ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆ ಬಂದರೆ ಎದುರಿಸಲು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಮ್ಲಜನಕದ ಕೊರತೆ ಉಂಟಾಗದಂತೆ ವ್ಯವಸ್ಥೆ ಮಾಡಲಾಗಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಭಾನುವಾರ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಬೆಂಗಳೂರು: ‘ನಮ್ಮದು (ಕಾಂಗ್ರೆಸ್) ಕಟ್ಟುವ ಪರಂಪರೆ. ಬಿಜೆಪಿಯವರದ್ದು ಉರುಳಿಸುವ ಪರಂಪರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ದೇಶವನ್ನು ಕಟ್ಟಿದ ಮಹನೀಯರ ಹೆಸರು ಬದಲಿಸುವ ಚರ್ಚೆ ನಡೆಯುತ್ತಿದೆ. ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಷಡ್ಯಂತ್ರ ನಡೆದಿದೆ. ಮಹನೀಯರ ಹೆಸರು ಬದಲಿಸಿದರೂ ಅವರು ಜನಮಾನಸದಲ್ಲಿ ಚಿರಸ್ಥಾಯಿ ಎನ್ನುವುದನ್ನು ಮರೆಯಬಾರದು’ ಎಂದರು.

ಕೆಪಿಸಿಸಿ ಸಮಿತಿ ವತಿಯಿಂದ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗ ರೆಡ್ಡಿ, ಸಲೀಂ ಅಹಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಭಾಗವಹಿಸಿದ್ದರು.

ಬೆಂಗಳೂರು: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುದ್ರಿತ ಭಾಷಣವನ್ನಷ್ಟೇ ಓದುವ ಸಂಪ್ರದಾಯವನ್ನು ಹಿಂದಿನ ಎಲ್ಲ ಮುಖ್ಯಮಂತ್ರಿಗಳು ಪಾಲಿಸಿಕೊಂಡು ಬಂದಿದ್ದರು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪ್ರದಾಯ ಮುರಿದು ಮುದ್ರಿತ ಭಾಷಣದ ಪ್ರತಿಯಲ್ಲಿಲ್ಲದ ಹಲವು ವಿಚಾರಗಳನ್ನು ಮಾತನಾಡಿದರು.

ಭಾಷಣದ ನಡುವೆಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ನೆನಪಿಸಿಕೊಂಡರು. ಅವರಿಗೆ ಅಭಿನಂದನೆಯನ್ನೂ ಹೇಳಿದರು.

'ನನ್ನನ್ನು ಹಲವರು ಅನುಮಾನದಿಂದ ನೋಡುತ್ತಿದ್ದಾರೆ. ಹಲವರು ಟೀಕೆಗಳನ್ನೂ ಮಾಡುತ್ತಿದ್ದಾರೆ. ಅನುಮಾನ, ಟೀಕೆಗಳನ್ನೇ ಯಶಸ್ಸಿನ ಮೆಟ್ಟಿಲಾಗಿ ಪರಿವರ್ತಿಸಿಕೊಂಡು ಸಾಗುವೆ' ಎಂದು ಬೊಮ್ಮಾಯಿ ಹೇಳಿದರು.

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಭಾಗವಾಗಿ ರಾಜ್ಯದ ವಿವಿಧ ಜನ ಸಮುದಾಯಗಳನ್ನು ಕೇಂದ್ರೀಕರಿಸಿದ 14 ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

'ಅಮೃತ ಗ್ರಾಮ ಪಂಚಾಯಿತಿ' ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಪ್ರತಿ ಮನೆಗೆ ಶುದ್ಧವಾದ ಕುಡಿಯುವ ನೀರಿನ ಪೂರೈಕೆ, ಪಂಚಾಯಿತಿಯಲ್ಲಿ ಡಿಜಿಟಲ್ ಗ್ರಂಥಾಲಯ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದರು.

* ಅಮೃತ ಗ್ರಾಮ ಪಂಚಾಯಿತಿ
* ಅಮೃತ ಗ್ರಾಮೀಣ ವಸತಿ ಯೋಜನೆ
* ಅಮೃತ ನಿರ್ಮಲ ನಗರ ಯೋಜನೆ
* ಅಮೃತ ಅಂಗನವಾಡಿ ಕೇಂದ್ರಗಳ ನಿರ್ಮಾಣ ಯೋಜನೆ
* ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆ
* ಅಮೃತ ಕ್ರೀಡಾ ಪ್ರೋತ್ಸಾಹ ಯೋಜನೆ

ಉಡುಪಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು ರಾಜ್ಯದಲ್ಲಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಗೆ ಒತ್ತು ನೀಡುವ ಮೂಲಕ ಗ್ರಾಹಕರು, ರೈತರು ಹಾಗೂ ಉದ್ಯಮಿ ಸ್ನೇಹಿ ನೀತಿ ಜಾರಿಗೆ ಒತ್ತು ನೀಡಲಾಗುವುದು. ರಾಜ್ಯದ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಕ್ರಿಯಾಯೋಜನೆ ಸಿದ್ಧಪಡಿಸಲಾಗುವುದು ಎಂದರು.

ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು 75 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಪರೇಡ್ಗೆ ಸಜ್ಜಾಗಿದ್ದ ತಂಡಗಳ ಬಳಿಗೆ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನಂದಿನಿದೇವಿ ಇದ್ದರು.

ಸ್ವಾತಂತ್ರ್ಯ ಮಹೋತ್ಸವವನ್ನು ಬೆಳಗಾವಿ ಜಿಲ್ಲೆಯಾದ್ಯಂತ ಸರಳವಾಗಿ ಭಾನುವಾರ ಆಚರಿಸಲಾಯಿತು.

ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಉತ್ಸವ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಗೌರವ ರಕ್ಷೆ ಸ್ವೀಕರಿಸಿದರು

ಯಾದಗಿರಿ ನಗರದ ಪದವಿ ಪೂರ್ವ ಕಾಲೇಜು ಮೈದಾನ ಆವರಣದಲ್ಲಿ ಭಾನುವಾರ 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಧ್ವಜಾರೋಹಣ ನೆರವೇರಿಸಿದರು.

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿವರೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪಾದಯಾತ್ರೆ ನಡೆಸಿದರು. ಬಳಿಕ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗರೆಡ್ಡಿ, ಸಲೀಂ ಅಹಮದ್ ಹಾಜರಿದ್ದರು.

ಚಿಕ್ಕಬಳ್ಳಾಪುರ ನಗರದ ಸರ್.ಎಂ.ವಿಶ್ವೇಶರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಸ್ವಾತಂತ್ರ್ಯ ದಿನದ ಧ್ವಜಾರೋಹಣ ನೆರವೇರಿಸಿದರು. ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಸಚಿವರು ಪಥ ವೀಕ್ಷಣೆ ಮಾಡಿದರು.

ತುಮಕೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಧ್ವಜಾರೋಹಣ ನೆರವೇರಿಸಿದರು.

ಕಲಬುರ್ಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಎಸ್ಪಿ ಡಾ.ಸಿಮಿ ಮರಿಯಂ ಜಾರ್ಜ್, ಜಿ.ಪಂ. ಸಿಇಓ ಡಾ.ದಿಲೀಷ್ ಶಶಿ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಇದ್ದರು.

75ನೇ ಸ್ವಾತಂತ್ರ್ಯೋತ್ಸವ ಆಚರಣೆ ಅಂಗವಾಗಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಮೈಸೂರಿನಲ್ಲಿ ಧ್ವಜಾರೋಹಣ ನೆರವೇರಿಸಿದರು.

ಫೀಲ್ಡ್ ಮಾರ್ಷಲ್ ಮಾಣಿಕ್ಷಾ ಪರೇಡ್ ಮೈದಾನದಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಆಚರಣೆಯಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡು ಮಾತನಾಡಲಿದ್ದಾರೆ. ನೇರಪ್ರಸಾರವನ್ನು ಈ ಲಿಂಕ್ ನಲ್ಲಿ ವೀಕ್ಷಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.