ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ ಗ್ಯಾರಂಟಿ ಕದ್ದು ಮೋದಿ ಚುನಾವಣೆ ಎದುರಿಸುತ್ತಿದ್ದಾರೆ; ಡಿಕೆಶಿ

Published 19 ನವೆಂಬರ್ 2023, 15:25 IST
Last Updated 19 ನವೆಂಬರ್ 2023, 15:25 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆಯನ್ನು ಪ್ರಧಾನಿ ಮೋದಿ ಎದುರಿಸುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಲೇವಡಿ ಮಾಡಿದರು.

ಕೆಪಿಸಿಸಿ ಕಚೇರಿಯ ‘ಭಾರತ್‌ ಜೋಡೊ’ ಸಭಾಂಗಣದಲ್ಲಿ ಭಾನುವಾರ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾ ಘಟಕಗಳ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಇಲ್ಲವೇ ಎಂದು ತಿಳಿಯಲು ಸಚಿವರಿಗೆ ಸೂಚನೆ ನೀಡಲಾಗಿದೆ. ಇದೇ 28ರಂದು ಕಾಂಗ್ರೆಸ್‌ ಸಂಸ್ಥಾಪಕರ ದಿನ. ಈ ದಿನದಂದೇ ಪಕ್ಷದ ವತಿಯಿಂದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಸಮೀಕ್ಷೆ ಮಾಡಲು ಸಮಿತಿ ರಚಿಸಲಾಗುವುದು’ ಎಂದರು.

‘ಬಿಜೆಪಿ ಮತ್ತು ಜೆಡಿಎಸ್‌ನವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ಗೆ ಮತ ಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸ್‌ ತೆಗೆದುಕೊಳ್ಳುವಂತಹ ಕಾನೂನು ತರುತ್ತಾರೆ. ಅವರ ಈ ಜನವಿರೋಧಿ ಬುದ್ದಿಯನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಲಿ, ಕಡಿಮೆ ಮಾಡುವುದಾಗಲಿ ಯಾವುದನ್ನೂ ಕಾಂಗ್ರೆಸ್‌ ಸರ್ಕಾರ ಮಾಡುವುದಿಲ್ಲ. ಈ ವಿಚಾರಗಳನ್ನು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ನಾಯಕರು ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದರು.

‘ಇಂದಿರಾಗಾಂಧಿ ಅವರ ಬಗ್ಗೆ ಸೋನಿಯಾ ಗಾಂಧಿ ಬರೆದಿರುವ ಪುಸ್ತಕವನ್ನು ಶೀಘ್ರದಲ್ಲೇ ಕನ್ನಡದಲ್ಲಿ ಪ್ರಕಟಿಸಲಾಗುವುದು. ಈ ಪುಸ್ತಕದಲ್ಲಿ ಇಂದಿರಾಗಾಂಧಿ ಅವರು ಕಾಂಗ್ರೆಸ್‌ ಪಕ್ಷದ ಬಗ್ಗೆ ಹೇಳಿದ ಮಾತುಗಳನ್ನು ಉಲ್ಲೇಖಿಸಲಾಗಿದೆ’ ಎಂದರು.

ಅವಕಾಶ ವಂಚಿತರಿಗೆ ಶಕ್ತಿ: ‌‘ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹೀಗೆ ಎಲ್ಲ ಅವಕಾಶ ವಂಚಿತರಿಗೆ ಶಕ್ತಿ ತುಂಬುವುದೇ ನಿಜವಾದ ಸ್ವಾತಂತ್ರ್ಯದ ಅರ್ಥ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಅವಕಾಶ ವಂಚಿತರಿಗಾಗಿ ಶ್ರಮಿಸಿದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ಅವಕಾಶ ವಂಚಿತರ ಬಗ್ಗೆ ಕಾಳಜಿ, ಉಗ್ರವಾದವನ್ನು ತೀವ್ರವಾಗಿ ಹತ್ತಿಕ್ಕುವ ಕೆಲಸ ಮಾಡಿದರು. ಅದಕ್ಕಾಗಿಯೇ ಪ್ರಾಣ ಕಳೆದುಕೊಂಡರು. ದೇಶಕ್ಕಾಗಿ ಪ್ರಾಣ ತೆತ್ತ ಧೀಮಂತ ಮಹಿಳೆ ಅವರು. ಅವರ ಮಾರ್ಗದರ್ಶನದಲ್ಲಿ ನಡೆಯುವುದೇ ಅವರಿಗೆ ಸಲ್ಲಿಸುವ ಗೌರವ’ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್‌ ಹಾಗೂ ಸಚಿವ ಬೈರತಿ ಸುರೇಶ್, ಕಾಂಗ್ರೆಸ್‌ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT