ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ: CM ಸಿದ್ದರಾಮಯ್ಯ ಪ್ರಶ್ನೆ

Published 3 ಜನವರಿ 2024, 7:50 IST
Last Updated 3 ಜನವರಿ 2024, 7:50 IST
ಅಕ್ಷರ ಗಾತ್ರ

ಬೆಂಗಳೂರು: ಬಿ.ಎಸ್‌ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

1992ರ ಗಲಭೆಯ ಅರೋಪಿ ಹುಬ್ಬಳ್ಳಿಯ ಶ್ರೀಕಾಂತ ಬಂಧನ ವಿರೋಧಿಸಿ ರಾಜ್ಯದಾದ್ಯಂತ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಸಿದ್ದರಾಮಯ್ಯ ಹೀಗೆ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ‘ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ, ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ?’ ಎಂದು ಪ್ರಶ್ನಿಸಿದ್ದಾರೆ.

‘ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು. ಹುಬ್ಬಳ್ಳಿಯ ಆರೋಪಿಯನ್ನು ಸಮರ್ಥಿಸಿಕೊಂಡು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ ಸ್ವಲ್ಪ ಬುದ್ದಿ ಹೊಂದಿದವರಿದ್ದರೆ ದಯವಿಟ್ಟು ಆ ವ್ಯಕ್ತಿಯ ಮೇಲಿನ ಆರೋಪಗಳ ಪಟ್ಟಿಯನ್ನು ತರಿಸಿ ಓದಿ, ಆ ಮೇಲೆ ಹೋರಾಟಕ್ಕೆ ಇಳಿಯಿರಿ. ಜನಸಂಖ್ಯೆಯಲ್ಲಿ ಹಿಂದೂಗಳೇ ಬಹುಸಂಖ್ಯೆಯಲ್ಲಿರುವುದರಿಂದ ಜೈಲುಗಳಲ್ಲಿರುವ ಕೈದಿಗಳಲ್ಲಿಯೂ ಹಿಂದೂ ಧರ್ಮಿಯರೇ ಬಹುಸಂಖ್ಯೆಯಲ್ಲಿದ್ದಾರೆ. ಅವರೆಲ್ಲ ಹಿಂದೂ ಧರ್ಮಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ಬಿಜೆಪಿ ಅವರ ಪರವಾಗಿ ಹೋರಾಟ ನಡೆಸುತ್ತಾ?’ ಎಂದಿದ್ದಾರೆ.

‘ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ. ಇದು ಧರ್ಮದ್ರೋಹದ ನಡೆ. ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ‘ ಎಂದು ಅವರು ಹೇಳಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರಲ್ಲಿ ಈಗಲೂ ನಾನು ವಿನಂತಿ ಮಾಡುತ್ತಿದ್ದೇನೆ. ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಮಾಡುವುದನ್ನು ಕೈಬಿಟ್ಟು ಜವಾಬ್ದಾರಿಯುತವಾದ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ‘ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT