ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತಿಮೆ ಅನಾವರಣ| ಗೌಡರಿಗೆ ಆಹ್ವಾನವಿತ್ತು ಎಂದ ಬಿಜೆಪಿಗೆ ಜೆಡಿಎಸ್ ತಿರುಗೇಟು

Last Updated 12 ನವೆಂಬರ್ 2022, 5:08 IST
ಅಕ್ಷರ ಗಾತ್ರ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಥಾಪಿಸಲಾಗಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿತ್ತು ಎಂಬ ಬಿಜೆಪಿ ವಾದವನ್ನು ಜೆಡಿಎಸ್‌ ಶನಿವಾರ ಟೀಕಿಸಿದೆ.

ಈ ವಿಚಾರದಲ್ಲಿ ಬಿಜೆಪಿ ಸರ್ಕಾರ ಜನರ ದಾರಿ ತಪ್ಪಿಸುತ್ತಿದ್ದು, ಅಸಲಿ ಕಥೆಯನ್ನು ಮುಚ್ಚಿಡುತ್ತಿದೆ ಎಂದು ಹೇಳಿದೆ.

ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟನೆ ಮಾಡಿದ್ದರು. ‌

ಆಹ್ವಾನ ಇಲ್ಲ ಎಂದಿದ್ದ ಜೆಡಿಎಸ್‌

‘ಬೆಂಗಳೂರು ಅಭಿವೃದ್ಧಿಗೆ ಕೆಂಪೇಗೌಡರ ನಂತರ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ ಎಚ್‌.ಡಿ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರ್ಕಾರ ಆಹ್ವಾನಿಸದೇ ಇರುವುದು ಕನ್ನಡಿಗರಿಗೆ ಮಾಡಿದ ಅಪಮಾನ’ ಎಂದು ಜೆಡಿಎಸ್‌ ಆಕ್ಷೇಪ ವ್ಯಕ್ತಪಡಿಸಿತ್ತು.

ಬಿಜೆಪಿ ಸ್ಪಷ್ಟನೆ

ಇದಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ‘ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಸಿಎಂ ಬೊಮ್ಮಾಯಿ ಅವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ. ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ‌ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ. ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್‌ಗೆ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು’ ಎಂದು ಬಿಜೆಪಿ ಟ್ವೀಟ್‌ ಮಾಡಿತ್ತು.

ಮತ್ತೆ ವಾದ ಮುಂದುವರಿಸಿದ ಜೆಡಿಎಸ್‌

ಈ ವಾದ ವಿವಾದದ ಮುಂದುವರಿದ ಭಾಗವಾಗಿ ಶನಿವಾರ ಮತ್ತೊಂದು ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌ ಪಕ್ಷವು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ಮಾಡಿದೆ. ‘ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ. ಆದರೆ, ಮುಖ್ಯಮಂತ್ರಿಗಳೇ ಪತ್ರ ಬರೆದು ದೇವೇಗೌಡರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ’ ಎಂದು ಆರೋಪಿಸಿದೆ.

‘ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಎಂದು ಜೆಡಿಎಸ್‌ ಪ್ರಶ್ನೆ ಮಾಡಿದೆ.

‘ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ದೇವೇಗೌಡರ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?’ ಎಂದು ಕೇಳಿದೆ.

‘ಮರುದಿನದ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ. ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?’ ಎಂದು ಜೆಡಿಎಸ್‌ ಪ್ರಶ್ನಿಸಿದೆ.

‘ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಕತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ’ ಎಂದು ಜೆಡಿಎಸ್‌ ಹೇಳಿದೆ.

ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?

‘ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ, ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?’ ಎಂದು ಜಾತ್ಯತೀತ ಜನತಾದಳ ಪ್ರಶ್ನೆ ಮಾಡಿದೆ.

'ಸಬ್ ಕಾ ಸಾಥ್, ಸಬ್ ಕಾ ವಿಕಾಸ್'; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ’ ಎಂದು ಜೆಡಿಎಸ್‌ ಪ್ರತಿಪಾದಿಸಿದೆ.

ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ?

‘ಕುಟುಂಬ ರಾಜಕಾರಣ ಅಂತೀರಾ. ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ?’ ಎಂದು ಬಿಜೆಪಿ ಸವಾಲು ಎಸೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT