ಬೆಂಗಳೂರು: ‘ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿರುವ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಜೆಡಿಎಸ್ ಒತ್ತಾಯಿಸಿದೆ.
ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದ ಎದುರು ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಜೆಡಿಎಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಎಡಿಜಿಪಿ ಚಂದ್ರಶೇಖರ್ ವಿರುದ್ಧ ಧಿಕ್ಕಾರ ಕೂಗಿದರು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್‌ಗೌಡ, ‘ಅಧಿಕಾರಿಯಾಗಿ ಚಂದ್ರಶೇಖರ್ ಬಳಸಿರುವ ಭಾಷೆಯಿಂದ ಕುಮಾರಸ್ವಾಮಿ ಅವರ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರ ಭಾವನೆಗಳಿಗೆ ಘಾಸಿಯಾಗಿದೆ. ಅದಕ್ಕೆ ಕ್ಷಮೆ ಕೇಳಬೇಕು ಹಾಗೂ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ,ಟಿ.ಎನ್. ಜವರಾಯಿ ಗೌಡ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.