ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2024 | ಸರ್ವಜ್ಞ, ಮಾಜಿ CM ಬಂಗಾರಪ್ಪ ಸ್ಮಾರಕ ನಿರ್ಮಾಣ

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನ ಜನ್ಮಸ್ಥಳ ಅಭಿವೃದ್ದಿಗೆ ಪ್ರಾಧಿಕಾರ ರಚನೆ
Published 16 ಫೆಬ್ರುವರಿ 2024, 9:37 IST
Last Updated 16 ಫೆಬ್ರುವರಿ 2024, 9:37 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನ ಜನ್ಮಸ್ಥಳ ಅಭಿವೃದ್ದಿಗೆ ಪ್ರಾಧಿಕಾರ ರಚಿಸುವುದರ ಜೊತೆಗೆ ವಚನಕಾರ ಸರ್ವಜ್ಞ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

2024–25ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಂಬಂಧಪಟ್ಟಂತೆ ಅನೇಕ ಯೋಜನೆಗಳನ್ನು ಘೋಷಿಸಿದ್ದಾರೆ.

‘ಬಸವಣ್ಣನವರ ಜನ್ಮಸ್ಥಳವಾದ ಬಸವನಬಾಗೇವಾಡಿಯ ಅಭಿವೃದ್ಧಿಗೆ ‘ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ’ ರಚಿಸಲಾಗುವುದು. ಬಸವಣ್ಣ ಹಾಗೂ ಇತರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ವಚನ ಸಂಗ್ರಹಾಲಯ ಅಥವಾ ವಚನ ಮಂಟಪವನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುವುದು’ ಎಂದರು.

‘ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಸ್ಮಾರಕವನ್ನು ನಿರ್ಮಿಸಲಾಗುವುದು. ಜೊತೆಗೆ ತ್ರಿಪದಿಗಳ ಮೂಲಕ ಜೀವನಸಾರವನ್ನು ಹೇಳಿದ ವಚನಕಾರ ಸರ್ವಜ್ಞನ ಸ್ಮಾರಕವನ್ನೂ ಹಿರೇಕೆರೂರು ತಾಲ್ಲೂಕಿನಲ್ಲಿ ಅಭಿವೃದ್ಧಿಪಡಿಸಲಾಗುವುದು’ ಎಂದು ಹೇಳಿದರು.

ಇತರ ಪ್ರಮುಖ ಘೋಷಣೆಗಳು...

 • ಬಸವಣ್ಣನವರ ಬದುಕು, ಸಂದೇಶ, ಚಿಂತನೆಯನ್ನು ವ್ಯಾಪಕವಾಗಿ ಪ್ರಚುರಪಡಿಸುವ ನಿಟ್ಟಿನಲ್ಲಿ ಸರ್ವ ಧರ್ಮ ಸಂಸತ್ತನ್ನು ಬಸವ ಜಯಂತಿಯಂದು ಆಯೋಜಿಸಲಾಗುವುದು.

 • ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಎಲ್ಲಾ ಕಚೇರಿಗಳು, ಅಂಗಡಿ-ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು.

 • ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗಡಿಭಾಗದಲ್ಲಿ ಕನ್ನಡ ಶಾಲೆಗಳ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಕನ್ನಡ ಭಾಷೆ ಅಭಿವೃದ್ಧಿ ಮಾಡಲಾಗುವುದು.

 • ತುಳು, ಕೊಡವ, ಬ್ಯಾರಿ ಮತ್ತು ಕೊಂಕಣಿ ಕರ್ನಾಟಕದ ಪ್ರಾದೇಶಿಕ ಭಾಷೆಗಳಾಗಿದ್ದು, ಅವುಗಳ ಅಭಿವೃದ್ಧಿಗಾಗಿ ಅಕಾಡೆಮಿಗಳ ಮೂಲಕ ಭಾಷೆ, ಸಂಸ್ಕೃತಿ, ಸಾಹಿತ್ಯವನ್ನು ಪ್ರೋತ್ಸಾಹಿಸಲಾಗುವುದು.

 • ಅಳಿವಿನಂಚಿನಲ್ಲಿರುವ ಜಾನಪದ ಕಲಾ ಪ್ರಕಾರಗಳಾದ ದೊಡ್ಡಾಟ, ಸಣ್ಣಾಟ, ಶ್ರೀಕೃಷ್ಣ ಪಾರಿಜಾತ, ತೊಗಲು ಗೊಂಬೆಯಾಟ, ಸೂತ್ರದ ಗೊಂಬೆಯಾಟ, ಕರಗ ಮುಂತಾದವುಗಳ ಪುನರುಜ್ಜೀನಕ್ಕಾಗಿ ತರಬೇತಿ ಮತ್ತು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗುವುದು.

 • ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದವರ ಕಲೆ ಮತ್ತು ಸಂಸ್ಕೃತಿಯನ್ನು ಗುರುತಿಸಿ, ಉಳಿಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಲೆಮಾರಿ ಸಂಸ್ಕೃತಿ ಉತ್ಸವವನ್ನು ಆಯೋಜಿಸಲಾಗುವುದು.

 • ರಂಗಭೂಮಿಯ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಸ್ಥಾಪಿಸಲಾಗಿರುವ ರಂಗಾಯಣಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಉತ್ತೇಜನ ನೀಡಲಾಗುವುದು.

 • ಭಾರತದ ಪ್ರಸಿದ್ಧ ಸಾಮಾಜಿಕ ಮತ್ತು ರಾಜಕೀಯ ಚಿಂತಕರಾದ ನಾರಾಯಣ ಗುರುಗಳು, ಜ್ಯೋತಿಬಾ ಫುಲೆ, ಪೆರಿಯಾರ್ ರಾಮಸ್ವಾಮಿ, ರಾಮ ಮನೋಹರ ಲೋಹಿಯಾ ಹಾಗೂ ಬಾಬು ಜಗಜೀವನರಾಮ್ ರವರ ಬರಹಗಳನ್ನು ಕನ್ನಡಕ್ಕೆ ಭಾಷಾಂತರಿಸಿ ಪ್ರಕಟಿಸಲಾಗುವುದು.

 • ಸಂತ ಕವಿ ಕನಕದಾಸ ಅಧ್ಯಯನ ಕೇಂದ್ರದ ಮೂಲಕ ತತ್ವಪದ, ಕೀರ್ತನ ಸಾಹಿತ್ಯ ಮತ್ತು ಭಕ್ತಿ ಚಳವಳಿ ಸೇರಿದಂತೆ ಸಾಹಿತ್ಯ ಸಮೀಕ್ಷೆ, ಸಂಗ್ರಹಣೆ, ಪ್ರಕಟಣೆ ಮತ್ತು ಪ್ರಸಾರ ಕಾರ್ಯಗಳನ್ನು ಕೈಗೊಳ್ಳಲು ₹1 ಕೋಟಿ ಒದಗಿಸಲಾಗುವುದು.

 • ತತ್ವಪದಕಾರರು ಮತ್ತು ಸೂಫಿಗಳ ಬದುಕು ಮತ್ತು ಸಂದೇಶಗಳ ಅಧ್ಯಯನ ಕೈಗೊಳ್ಳಲು ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಮತ್ತು ಶಿವಯೋಗಿ ಸಿದ್ಧರಾಮೇಶ್ವರರವರ ಬದುಕು-ಬರಹ ಕುರಿತು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠಗಳನ್ನು ಸ್ಥಾಪಿಸಲಾಗುವುದು.

 • ಸಾಹಿತ್ಯ, ನಾಟಕ, ಜನಪದ ಕಲೆ, ನೃತ್ಯ, ಸಂಗೀತ ಸೇರಿದಂತೆ ಸಂಸ್ಕೃತಿಯ ವಿವಿಧ ಪ್ರಕಾರಗಳ ತರಬೇತಿ, ಪ್ರದರ್ಶನ ಮತ್ತು ಅಧ್ಯಯನದಲ್ಲಿ ತೊಡಗಿಸಿಕೊಂಡಿರುವ ಕೋಲಾರದ ಆದಿಮ ಸಾಂಸ್ಕೃತಿಕ ಕೇಂದ್ರದ ಅಭಿವೃದ್ಧಿಗಾಗಿ ಅಗತ್ಯ ನೆರವು ನೀಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT