ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂಪುರ್‌ ಶರ್ಮಾ ಹೇಳಿಕೆ ವಿವಾದ: ಕಟ್ಟೆಚ್ಚರದಿಂದಿರಲು ಪೊಲೀಸರಿಗೆ ಬೊಮ್ಮಾಯಿ ಸೂಚನೆ

Last Updated 11 ಜೂನ್ 2022, 3:49 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪ್ರವಾದಿ ಮಹಮ್ಮದ್ ಅವರ ಬಗ್ಗೆ ನೂಪುರ್ ಶರ್ಮಾ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ದೇಶದ ಕೆಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂಬುದಾಗಿ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಂಡು ಕಟ್ಟೆಚ್ಚರದಿಂದ ಇರಲು ಸೂಚಿಸಲಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಶಾಂತವಾಗಿದ್ದು ನಿಯಂತ್ರಣದಲ್ಲಿದೆ. ಆದರೂ ಜಾಗೃತವಾಗಿರಬೇಕೆಂದು ತಿಳಿಸಲಾಗಿದೆ. ಪ್ರತಿಯೊಂದು‌ ಠಾಣೆಯ ಸಿಪಿಐ ಅವರನ್ನು ಉಸ್ತುವಾರಿ ಮಾಡಿ, ಎಲ್ಲ ಸಮುದಾಯದವರ ಜತೆ ಸೌಹಾರ್ದಯುತ ವಾತಾವರಣ ನಿರ್ಮಿಸುವಂತೆ ಸೂಚಿಸಲಾಗಿದೆ. ಹುಧಾ ಪೊಲೀಸ್ ಕಮಿಷನರ್ ಹಾಗೂ ಧಾರವಾಡ ಎಸ್ಪಿ ಜೊತೆಯೂ ಈ ಕುರಿತು ಚರ್ಚಿಸಿದ್ದೇನೆ’ ಎಂದರು.

‘ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಇಬ್ಬರನ್ನು ಅಮಾನತು ಮಾಡಲಾಗಿದ್ದು, ತನಿಖೆ ಮುಂದುವರಿದಿದೆ. ಎಲ್ಲ ವಾರ್ಡ್'ನ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು’ ಎಂದು ಅವರು ತಿಳಿಸಿದರು.

‘ಬೆಂಗಳೂರಿನಲ್ಲಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆದದ್ದು ದುರದೃಷ್ಟಕರ. ಇನ್ನಷ್ಟು ಕಠಿಣ ಕಾನೂನು ಜಾರಿಗೆ ತರುವ ಚಿಂತನೆಯಿದ್ದು, ಕಾನೂನು ಪಂಡಿತರ ಜತೆ ಚರ್ಚಿಸಲಾಗಿದೆ. ಮುಂಬರುವ ದಿನಗಳಲ್ಲಿ ಇಂತಹ ಕೃತ್ಯ ಎಸಗಿದವರು ಕಠಿಣ ಶಿಕ್ಷೆಗೆ ಒಳಗಾಗಲಿದ್ದಾರೆ’ ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.

‘ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಬಂದಿದ್ದು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಲಿದ್ದೇನೆ. ನಾಲ್ಕು ಕ್ಷೇತ್ರಗಳಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವ ವಿಶ್ವಾಸವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT