ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

150 ಕ್ಷೇತ್ರದಲ್ಲಿ ಗೆಲ್ಲುವ ಗುರಿ: ರಾಘವೇಂದ್ರ

ಅಭ್ಯರ್ಥಿಗಳ ಆಯ್ಕೆ–ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಸಂಸದ ರಾಘವೇಂದ್ರ
Last Updated 1 ಏಪ್ರಿಲ್ 2023, 5:30 IST
ಅಕ್ಷರ ಗಾತ್ರ

ಕೋಲಾರ: ‘ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ 150 ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಚುನಾವಣೆ ಎದುರಿಸುತ್ತಿದ್ದೇವೆ’ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ನಗರದ ಹೊರವಲಯದ ರತ್ನಾ ಕನ್ವೆನ್ಷನ್ ಹಾಲ್‌ನಲ್ಲಿ ಶುಕ್ರವಾರ ಜಿಲ್ಲೆಯ ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಲು ತೀರ್ಮಾನಿಸಲಾಗಿದೆ. ಜಿಲ್ಲೆ ಹಿಂದುಳಿದಿದ್ದು, ಮುಂಬರುವ ದಿನಗಳಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿ ಅಭಿವೃದ್ಧಿಪಥದಲ್ಲಿ ಕೊಂಡೊಯ್ಯಲಿದ್ದಾರೆ’ ಎಂದು ಹೇಳಿದರು.

‘ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಕಂಡುಬರುತ್ತಿದ್ದು, ಕಾಂಗ್ರೆಸ್ ಶಾಸಕರು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ. ಅಭಿವೃದ್ಧಿ ಕಡೆಗಣಿಸಿ ಸ್ವಹಿತಕ್ಕಾಗಿ ಶಾಸಕ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಹೀಗಾಗಿಯೇ, ಎಲ್ಲ ಕಡೆ ಬಿಜೆಪಿ ಗೆಲುವಿಗೆ ಪೂರಕ ವಾತಾವರಣವಿದೆ. ಜೆಡಿಎಸ್, ಕಾಂಗ್ರೆಸ್ ಪೈಪೋಟಿ ನೀಡಲಿವೆಯಾದರೂ ಜನರು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ತೀರ್ಮಾನಿಸಿದ್ದು, ಆರೂ ಕ್ಷೇತ್ರಗಳಲ್ಲಿ ಪ್ರಬಲವಾಗಿ ಪೈಪೋಟಿ ನೀಡಲು ಸಜ್ಜಾಗಿದ್ದೇವೆ’ ಎಂದರು.

‘ಕಾಂಗ್ರೆಸ್ ದಿನದಿಂದ ದಿನಕ್ಕೆ ಜನರಿಂದ ಮರೆಯಾಗುತ್ತಿರುವ ಪಕ್ಷವಾಗಿದೆ. ಜನರ ಮಧ್ಯೆ ನೆನಪಿಗಾಗಿ ಅಲ್ಲೊಂದು ಇಲ್ಲೊಂದು ಕಾರ್ಯಕ್ರಮ ಮಾಡುತ್ತಿದ್ದಾರೆ. ಅವರು ರಾಹುಲ್ ಗಾಂಧಿಯಷ್ಟೇ ಅಲ್ಲ, ಯಾರನ್ನು ಕರೆಸಿ ಸಭೆ, ಸಮಾರಂಭ ಮಾಡಿಸಿದರೂ ಜನ ಮತ ಹಾಕುವುದಿಲ್ಲ’ ಎಂದು ಹೇಳಿದರು.

‘ಕೋಲಾರದ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆಯ ಅಭಿಪ್ರಾಯ ಸಂಗ್ರಹಣಾ ಪೂರ್ವಭಾವಿ ಸಭೆಗೆ ನನ್ನನ್ನು ನೇಮಕ ಮಾಡಿದ್ದಾರೆ. ಪ್ರಜಾಪ್ರಭುತ್ವದ ಆಶಯದಂತೆ ಬಿಜೆಪಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯುವುದು ಹೆಮ್ಮೆಯ ವಿಷಯವಾಗಿದೆ’ ಎಂದರು.

ಪಕ್ಷದ ಮುಖಂಡ ಕೇಶವ ಪ್ರಸಾದ್, ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್, ಜಿತೇಂದ್ರ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT