ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಷ್ಟೊಂದು ಗತಿಗೇಡಿನ ಸರ್ಕಾರ ಹಿಂದೆ ಇರಲಿಲ್ಲ, ಮುಂದೆಯೂ ಬರಲ್ಲ: ಸಿದ್ದರಾಮಯ್ಯ

ಅಕ್ಷರ ಗಾತ್ರ

ಬೆಂಗಳೂರು: ಇಷ್ಟೊಂದು ಗತಿಗೇಡಿನ ಸರ್ಕಾರ ಹಿಂದೆ ಇರಲಿಲ್ಲ, ಮುಂದೆಯೂ ಬರಲ್ಲ ಎಂದು ರಾಜ್ಯ ಸರ್ಕಾರ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರಿ ಶಾಲೆಯ ಮಕ್ಕಳಿಗೆ ಸೈಕಲ್, ಶೂ, ಸಾಕ್ಸ್‌ ವಿತರಿಸುವ ಯೋಜನೆಗಳನ್ನು ಕೈ ಬಿಟ್ಟಿರುವುದನ್ನು ಪ್ರಶ್ನಿಸಿರುವ ಅವರು ‘ಪ್ರಜಾವಾಣಿ’ ವರದಿ ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

‘ವಿದ್ಯಾರ್ಥಿನಿಯರಿಗೆ ಸೈಕಲ್‌ಗಳನ್ನು ನೀಡುವ ಯೋಜನೆ ಹಿಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರದ್ದು. ಆ ಯೋಜನೆಯನ್ನು ಸ್ಥಗಿತಗೊಳಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪನವರ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆಯೇ’ ಎಂದು ಪ್ರಶ್ನಿಸಿದ್ದಾರೆ.

‘ಶಾಲಾ ಬಡ ಮಕ್ಕಳಿಗಾಗಿ ನಮ್ಮ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಒಂದೊಂದಾಗಿ ಸ್ಥಗಿತಗೊಳಿಸಲು ಬಿಜೆಪಿ ಸರ್ಕಾರ ಹೊರಟಿದೆ. ವಿದ್ಯಾಸಿರಿ ಯೋಜನೆಗೆ ಹಣ ನೀಡುತ್ತಿಲ್ಲ, ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿ ಊಟಕ್ಕೂ ಕಲ್ಲು ಹಾಕುತ್ತಿದೆ. ಈಗ ಸೈಕಲ್, ಶೂ, ಸಾಕ್ಸ್ ಗಳನ್ನು ಕೂಡಾ ಕಿತ್ತುಕೊಳ್ಳುತ್ತಿದೆ’ ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

ವೆಬ್ ಸೈಟ್‌ನಲ್ಲಿ ಅಪ್‌ಲೋಡ್ ಮಾಡಿರುವ ಕಲಿಕಾ ಹಾಳೆಗಳನ್ನು ಶಿಕ್ಷಕರು ಸ್ವಂತ ಖರ್ಚಿನಿಂದ ಡೌನ್‌ಲೋಡ್ ಮಾಡಿಕೊಂಡು, ಜೆರಾಕ್ಸ್ ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇಷ್ಟೊಂದು ಗತಿಗೇಡಿನ ಸರ್ಕಾರ ಹಿಂದೆ ಇರಲಿಲ್ಲ, ಮುಂದೆಯೂ ಅಧಿಕಾರಕ್ಕೆ ಬರಲ್ಲ’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

‘ಕೊರೊನಾ ಕಾಲದ ಕಲಿಕಾ ಅಂತರವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ‘ವಿದ್ಯಾಪ್ರವೇಶ’ ಮತ್ತು ‘ಕಲಿಕಾ ಚೇತರಿಕೆ’ ಎಂಬ ಎರಡು ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಇದಕ್ಕೆ ಸಂಬಂಧಿಸಿದ ಕಲಿಕಾ ಹಾಳೆಗಳನ್ನು ಕೂಡಾ ಪೂರೈಸಲು ಬಿಜೆಪಿ ಸರ್ಕಾರದಲ್ಲಿ ದುಡ್ಡಿಲ್ಲ’ ಎಂದು ಟೀಕಿಸಿದ್ದಾರೆ.

‘ಇಂದಿನ ದಿನದವರೆಗೆ ಶಾಲಾ ಮಕ್ಕಳಿಗೆ ನೀಡಬೇಕಾಗಿದ್ದ ಪಠ್ಯಪುಸ್ತಕಗಳ ಬಗ್ಗೆ ಖಚಿತ ತೀರ್ಮಾನವನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕೆಲವು ಶಾಲೆಗಳಿಗೆ ಹಳೆಯ ಪಠ್ಯ, ಇನ್ನು ಕೆಲವು ಶಾಲೆಗಳಿಗೆ ಹೊಸ ಪಠ್ಯ, ಉಳಿದ ಶಾಲೆಗಳಿಗೆ ಪಠ್ಯವೇ ಇಲ್ಲದಂತಹ ದುಸ್ಥಿತಿ ಇದೆ’ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಂದೆಡೆ ರಾಜ್ಯ ಬಿಜೆಪಿ ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸೈಕಲ್, ಶೂ, ಸಾಕ್ಸ್ ನೀಡದೆ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಇದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್‌ಗಳನ್ನು ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ ಶೇಕಡ 40ರಷ್ಟು ಕಮಿಷನ್‌ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT