ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಬಿಡಲ್ಲ: ಪರಮೇಶ್ವರ

Published 26 ಮೇ 2024, 16:04 IST
Last Updated 26 ಮೇ 2024, 16:04 IST
ಅಕ್ಷರ ಗಾತ್ರ

ಬೆಂಗಳೂರು: ‘ಗೂಂಡಾ ವರ್ತನೆ, ದಾದಾಗಿರಿ ಮಾಡಿ ಉಳಿದುಕೊಳ್ಳುತ್ತೇವೆ ಎಂದು ಯಾರಾದರೂ ಭಾವಿಸಿದ್ದರೆ, ಅದು ಸಾಧ್ಯವಿಲ್ಲ. ಇಂತಹ ಘಟನೆಗಳನ್ನು ಸಹಿಸುವುದಿಲ್ಲ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಎಚ್ಚರಿಕೆ ನೀಡಿದರು.

ಅಲ್ಲದೇ, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುವುದಕ್ಕೂ ಬಿಡುವುದಿಲ್ಲ ಎಂದು ಅವರು ಭಾನುವಾರ ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.

‘ಶಾಸಕರೊಬ್ಬರು ಠಾಣೆಯೊಳಗೆ ಹೋಗಿ ಗಲಾಟೆ ಮಾಡಿ, ಪೊಲೀಸರ ಮೇಲೆ ದಾಂಧಲೆ ಮಾಡಿದರೆ ಸಮಾಜದಲ್ಲಿ ಶಾಂತಿ ಹೇಗಿರಲು ಸಾಧ್ಯ? ಯಾರೂ ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಪದೇ ಪದೇ ಹೇಳುತ್ತಿದ್ದೇನೆ. ಶಾಸಕರಾಗಲಿ, ಸಂಸದರಾಗಲಿ, ಇನ್ಯಾರೇ ಆಗಲಿ ಅವರನ್ನು ಬಿಡುವ ಪ್ರಶ್ನೆ ಇಲ್ಲ. ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ’ ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಪ್ರಕರಣವನ್ನು ಪ್ರಸ್ತಾಪಿಸಿ ಹೇಳಿದರು.

‘ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಇನ್ಸ್‌ಪೆಕ್ಟರ್, ಪಿಎಸ್‌ಐನನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಕ್ರಮ ತೆಗೆದುಕೊಂಡಿಲ್ಲ’ ಎಂದರು.

ಪೊಲೀಸರು ಹಣಕ್ಕಾಗಿ ಪೀಡಿಸುತ್ತಿದ್ದರು ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ‘ತನಿಖೆಯಲ್ಲಿ ಎಲ್ಲವೂ ಗೊತ್ತಾಗುತ್ತದೆ. ಅಧಿಕಾರಿಗಳು ಈ ರೀತಿ ಭಾಗಿಯಾಗಿರುವುದು ಕಂಡು ಬಂದರೆ, ಅಂತಹವರನ್ನು ಸೇವೆಯಿಂದಲೇ ವಜಾಗೊಳಿಸಲಾಗುವುದು’ ಎಂದರು.

ಕರ್ನಾಟಕ ಬಿಹಾರವಾಗುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ಹೇಗಿದ್ದಾವೆ ಎಂಬುದನ್ನು ನೋಡಿಕೊಳ್ಳಲಿ. ಗುಜರಾತ್‌ನಲ್ಲಿ ಬೆಂಕಿ ಅವಘಡದಿಂದ 27 ಜನ ಸತ್ತಿದ್ದಾರೆ. ಅದಕ್ಕೆ ಯಾರು ಹೊಣೆ? ಅಲ್ಲಿನ ಮುಖ್ಯಮಂತ್ರಿ, ಗೃಹ ಸಚಿವರು ರಾಜೀನಾಮೆ ಕೊಡಬೇಕಲ್ಲ? ಹೇಳೋದು ಸುಲಭ’ ಎಂದು ಅವರು ಕಿಡಿಕಾರಿದರು.

‘ಗಾಳಿಯಲ್ಲಿ ಗುಂಡು ಹೊಡೆದಂತೆ ಮಾತನಾಡಬಾರದು’

ಬೆಂಗಳೂರು: ಪೆನ್‌ಡ್ರೈವ್‌ ಪ್ರಕರಣದಲ್ಲಿ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆದ ಹಾಗೆ, ಯಾರದ್ದೋ ಹೆಸರು ಹೇಳುವ ಅಗತ್ಯವಿಲ್ಲ. ತನಿಖೆ ಆಗುವ ಮುಂಚೆಯೇ ಹೇಳಿಕೆಗಳನ್ನು ನೀಡಿದರೆ ತೊಂದರೆ ಆಗುತ್ತದೆ ಎಂದು ಪರಮೇಶ್ವರ ಅವರು ಹೇಳಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ನಿಜವಾದ ಆರೋಪಿಗೆ ಶಿಕ್ಷೆ ಆಗಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ನಿಜವಾದ ಆರೋಪಿ ಯಾರು? ಈ ಪ್ರಕರಣದಲ್ಲಿ ಪ್ರಜ್ವಲ್‌ ಪಾತ್ರ ಏನು ಎಂಬುದಕ್ಕಾಗಿಯೇ ತನಿಖೆ ನಡೆಸಬೇಕು ಎಂಬ ಕಾರಣಕ್ಕಾಗಿಯೇ ಎಸ್‌ಐಟಿ ರಚಿಸಲಾಗಿದೆ’ ಎಂದರು.

ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದುಪಡಿಸುವಂತೆ ಮೇ 1 ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆ ಪತ್ರ ಎಲ್ಲಿ ಹೋಯಿತು? ಮುಖ್ಯಮಂತ್ರಿಯವರ ಪತ್ರ ಪ್ರಧಾನಿ ಕಚೇರಿಗೆ ಹೋಗುತ್ತದೆ ಎಂದಾದರೆ ಅದಕ್ಕೆ ಗೌರವ ಸಿಗಬೇಕಲ್ಲವೆ? ಕರ್ನಾಟಕ ಮುಖ್ಯಮಂತ್ರಿ ಈಗ ಪತ್ರ ಬರೆದಿದ್ದಾರೆ ಎಂದು ವಿದೇಶಾಂಗ ಸಚಿವರು ಹೇಳಿರುವುದು ಸರಿಯಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT