ಬೆಂಗಳೂರು: ಕೋವಿಡ್ ರೋಗದ ನಿವಾರಣೆ ಮತ್ತು ತಡೆಗಟ್ಟುವಿಕೆಯ ಹೆಸರಿನಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಎರಡೂ ಇಲಾಖೆಗಳು ಕೋವಿಡ್ ನಿರ್ವಹಣೆಗಾಗಿ ಔಷಧಿ ಹಾಗೂ ಉಪಕರಣಗಳ ಖರೀದಿಸಿರುವುದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು (ಪಿಎಸಿ) ನೀಡಿರುವ ವರದಿಯಲ್ಲಿ ಗಂಭೀರವಾದ ಆರೋಪಗಳ ಬಗ್ಗೆ ವಿವರಿಸಲಾಗಿದೆ. ಹೀಗಾಗಿ, ಈ ಪ್ರಕರಣವನ್ನು ತನಿಖೆ ನಡೆಸುವುದು ಸೂಕ್ತವೆಂದು ವಿಚಾರಣಾ ಆಯೋಗ ರಚಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಮೂರು ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಸಮಗ್ರ ಮಾಹಿತಿ, ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗಳು ಸಲ್ಲಿಸಬೇಕು. ಆಯೋಗದ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಅನುಕೂಲ ಆಗುವಂತೆ ಆಯೋಗದ ನ್ಯಾಯಮೂರ್ತಿ, ಕಾರ್ಯದರ್ಶಿ ಹಾಗೂ ಅಧಿಕಾರಿ, ಸಿಬ್ಬಂದಿಗೆ ವಾಹನ, ಪೀಠೋಪಕರಣ ಮತ್ತಿತರ ಸೌಲಭ್ಯವನ್ನು ಆರೋಗ್ಯ ಇಲಾಖೆಯ ಆಯುಕ್ತರು ಒದಗಿಸಬೇಕು ಎಂದೂ ತಿಳಿಸಲಾಗಿದೆ.
ನ್ಯಾ. ನಾಗಮೋಹನ್‌ದಾಸ್ ಆಯೋಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕಾಮಗಾರಿಗಳ ಟೆಂಡರ್, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು, ಬಾಕಿ ಮೊತ್ತ ಬಿಡುಗಡೆ ಮತ್ತಿತರ ವಿಷಯಗಳಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಮಾಡಿದ್ದ ಆರೋಪದ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿಯನ್ನು ವಿಚಾರಣಾ ಆಯೋಗ ಆಗಿ ಬದಲಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸಮಿತಿ ರಚಿಸಿ ಆಗಸ್ಟ್ 17ರಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಲಾಗಿದೆ. ಅದರ ಬದಲು, ಪ್ರಕರಣದ ತನಿಖೆಗೆ ಎಚ್.ಎನ್. ನಾಗಮೋಹನ್‌ದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ನೇಮಿಸಲಾಗಿದೆ.
ಹೆಚ್ಚಿನ ಪ್ರಮಾಣದಲ್ಲಿ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಾದ ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಗಳ ಕುರಿತು ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ವಿವರವಾದ ತನಿಖೆ ನಡೆಸಿ, ಲೋಪದೋಷಗಳ ಮಾಹಿತಿ ಹಾಗೂ ಅದಕ್ಕೆ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿಯನ್ನು ಮೂರು ತಿಂಗಳ ಒಳಗೆ ಸಲ್ಲಿಸಬೇಕು ಎಂದೂ ಅಧಿಸೂಚನೆಯಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.