ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ | ಸುಗ್ರೀವಾಜ್ಞೆ ವಾಪಸ್‌: ಡಿ.ಕೆ. ಶಿವಕುಮಾರ್

ಮಸೂದೆ ಮಂಡಿಸಲು ರಾಜ್ಯಪಾಲರ ಸೂಚನೆ
Published 30 ಜನವರಿ 2024, 23:30 IST
Last Updated 30 ಜನವರಿ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿರುವ ಎಲ್ಲ ಅಂಗಡಿ, ಹೋಟೆಲ್‌, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮಗಳ ನಾಮಫಲಕಗಳಲ್ಲಿ ಶೇ 60‌ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಿ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಅಂಕಿತ ಹಾಕದೆ ವಾಪಸು ಮಾಡಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ನಾಮಫಲಕಗಳು ಶೇ 60ರಷ್ಟು ಕನ್ನಡದಲ್ಲೇ ಇರಬೇಕು ಎಂದು ನಾವು ಕಾನೂನು ಮಾಡಿ ಸುಗ್ರೀವಾಜ್ಞೆ ಹೊರಡಿಸಿದ್ದೆವು. ಸುಗ್ರೀವಾಜ್ಞೆಯ ಬದಲು ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ’ ಎಂದರು.

ನಾಮಫಲಕಗಳಲ್ಲಿ ಕನ್ನಡ ಬಳಸದೇ ಇರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣಗೌಡರ ಬಣದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ದೇವನಹಳ್ಳಿ ಸಮೀಪದ ಸಾದಹಳ್ಳಿ ಗೇಟ್‌ನಿಂದ ಹೊರಟ ಮೆರವಣಿಗೆ ಸಂಘರ್ಷಕ್ಕೂ ಕಾರಣವಾಗಿತ್ತು. ಕೆಲವು ಕಡೆಗಳಲ್ಲಿ ನಾಮಫಲಕಗಳನ್ನು ಪ್ರತಿಭಟನೆಕಾರರು ಒಡೆದು ಹಾಕಿದ್ದರು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ನಾರಾಯಣಗೌಡ ಸೇರಿದಂತೆ 40ಕ್ಕೂ ಹೆಚ್ಚು ಜನರನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿತ್ತು. 

ರಕ್ಷಣಾ ವೇದಿಕೆಯ ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಉನ್ನತಮಟ್ಟದ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆಯ ಅನುಷ್ಠಾನಕ್ಕೆ 2024ರ ಫೆ.28ರ ಗಡುವು ವಿಧಿಸಿದ್ದರು. ಈ ಉದ್ದೇಶದಿಂದ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ಕಾಯ್ದೆಯ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿಗೆ ತಂದು ಅಧಿಸೂಚನೆ ಹೊರಡಿಸಲು ಮತ್ತು ನಿಯಮಗಳನ್ನು ರೂಪಿಸಲು ತಕ್ಷಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದು ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿತ್ತು.

ಕಾಯ್ದೆಯಲ್ಲಿ, ‘ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಪ್ರಾಧಾನ್ಯ ನೀಡಬೇಕಾಗಿರುವುದರಿಂದ ಮೇಲಿನ ಅರ್ಧ ಭಾಗ ಎಂಬುದರ ಬದಲಾಗಿ, ಶೇ 60ರಷ್ಟು ಭಾಗ ಕನ್ನಡ ಬಳಕೆ ಮಾಡಬೇಕು ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಭಾಗದಲ್ಲೇ ಇರಬೇಕು. ಕನ್ನಡ ಸಂಸ್ಕೃತಿ ನಿರ್ದೇಶಕರ ಬದಲಿಗೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದವರನ್ನು ಸಂಚಾಲಕರು ಮತ್ತು ಕನ್ನಡ ಸಂಸ್ಕೃತಿ ಇಲಾಖೆಯವರನ್ನು ಸದಸ್ಯರನ್ನಾಗಿ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿ ಅದಕ್ಕೆ ಅಂಕಿತ ಹಾಕುವಂತೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT