ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಎಸ್ಎಸ್ಎಲ್ಸಿ) ನಡೆಸುವ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ, ಅಂಕಗಳ ಬದಲಿಗೆ ಗ್ರೇಡ್ ನೀಡುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿದೆ.

ಈ ಸಂಬಂಧ ಬೆಂಗಳೂರಿನ ಎಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ಇದೊಂದು ಪ್ರಚಾರದ ಹಿತಾಸಕ್ತಿ ಹೊಂದಿರುವ ಅರ್ಜಿಯಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ‘ಅರ್ಜಿದಾರರಿಗೆ ₹50 ಸಾವಿರ ದಂಡ ವಿಧಿಸಿ ವಜಾಗೊಳಿಸಲಾಗಿದೆ. ದಂಡದ ಮೊತ್ತವನ್ನು ಎರಡು ವಾರಗಳಲ್ಲಿ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು. ಇಲ್ಲವೇ, ಮೊತ್ತವನ್ನು ಭೂ ಕಂದಾಯ ಬಾಕಿಯಾಗಿ ವಸೂಲಿ ಮಾಡಲು ಜಿಲ್ಲಾಧಿಕಾರಿಗೆ ಸೂಚಿಸಿ’ ಎಂದು ಸರ್ಕಾರಕ್ಕೆ ನಿರ್ದೇಶಿಸಿತು.

ಇದಕ್ಕೆ ಅರ್ಜಿದಾರರ ಪರ ವಕೀಲರು, ‘ಹಿಂದಿಯನ್ನು ಸಂಪೂರ್ಣವಾಗಿ ಕೈಬಿಡಲಾಗುತ್ತದೆ ಎಂಬ ಸಚಿವರ ಹೇಳಿಕೆ ಸರಿಯಾದ ದೃಷ್ಟಿಕೋನವಲ್ಲ’ ಎಂದು ಆಕ್ಷೇಪಿಸಿ ಅರ್ಜಿಯ ಜೊತೆಗಿನ ಪತ್ರಿಕಾ ವರದಿಗಳ ಅಡಕವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಅಡಕಗಳನ್ನು ಪರಿಶೀಲಿಸಿದ ನ್ಯಾಯಪೀಠ, ‘ಪತ್ರಿಕಾ ವರದಿಯಲ್ಲಿ ಹಿಂದಿಯನ್ನು ಕೈಬಿಡುವ ಹೇಳಿಕೆಯೇ ಇಲ್ಲ. ಹಾಗಾಗಿ, ದಂಡದ ಮೊತ್ತವನ್ನು ₹1 ಲಕ್ಷಕ್ಕೆ ಏರಿಕೆ ಮಾಡಲಾಗುತ್ತಿದೆ’ ಎಂದು ಹೇಳಿತು. ಅಂತೆಯೇ, ಆದೇಶದಲ್ಲಿ ಮಾರ್ಪಾಡು ಮಾಡಿ ದಂಡದ ಮೊತ್ತವನ್ನು ₹1 ಲಕ್ಷಕ್ಕೆ ಏರಿಕೆ ಮಾಡಿತು.

ಇದೇ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರು, ‘ದಂಡದ ಮೊತ್ತವನ್ನು ವಕೀಲರ ಗುಮಾಸ್ತರ ನಿಧಿಗೆ ನೀಡಲು ಪರಿಗಣಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಕೋರಿಕೆ ಏನಿತ್ತು?: ‘ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಚಾಲ್ತಿಯಲ್ಲಿರುವ ಭಾಷಾ ನೀತಿಯನ್ನು ಬದಲಾವಣೆ ಮಾಡಬಾರದು ಮತ್ತು ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಅಂಕ ನೀಡುವ ಪದ್ಧತಿಯನ್ನು ಕೈಬಿಡುವ ಶಾಲಾ ಶಿಕ್ಷಣ ಇಲಾಖೆಯ ಉದ್ದೇಶಿತ ಬದಲಾವಣೆಯ ನಿರ್ಧಾರ ಅನುಷ್ಠಾನಗೊಳಿಸದಂತೆ ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

‘ಮೂರನೇ ಭಾಷೆಗೆ ಗ್ರೇಡ್ ನೀಡುವ ಹೊಸ ಪದ್ಧತಿಯನ್ನು 2026ರ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ತರಲಾಗುವುದು ಎಂಬ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆ ಏಕಪಕ್ಷೀಯವಾಗಿದೆ. ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕ ನೀಡುವ ಬದಲಿಗೆ ಗ್ರೇಡ್ ನೀಡಲಾಗುತ್ತದೆ’ ಎಂದು ಆಕ್ಷೇಪಿಸಿದ್ದರು.

‘ಸಚಿವರು ತಮ್ಮ ಈ ನಿರ್ಧಾರವನ್ನು ಪ್ರಕಟಿಸುವ ಮುನ್ನ ಸಾರ್ವಜನಿಕವಾಗಿ ಚರ್ಚೆ ನಡೆಸಿಲ್ಲ. ಸಚಿವ ಸಂಪುಟದ ಅನುಮೋದನೆ ಪಡೆದಿಲ್ಲ ಹಾಗೂ ಭಾಷಾ ತಜ್ಞರ ಸಲಹೆ ಪಡೆದಿಲ್ಲ. ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಅಂದರೆ, ಮಾರ್ಚ್ 31ರಂದು ಈ ರೀತಿಯ ಹೇಳಿಕೆ ಹೊರಬಿದ್ದಿರುವುದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ಈ ಕುರಿತಂತೆ ಯಾವುದೇ ಅಧಿಕೃತ ಸರ್ಕಾರಿ ಆದೇಶ ಅಥವಾ ಅಧಿಸೂಚನೆ ಹೊರಬಂದಿಲ್ಲ. ಸಚಿವರ ಈ ನಿರ್ಧಾರಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ’ ಎಂದು ವಿವರಿಸಲಾಗಿತ್ತು.

‘ಸರ್ಕಾರದ ಅಧಿಕೃತ ಆದೇಶವಿಲ್ಲದೆ ನೀತಿಯನ್ನು ಜಾರಿಗೆ ತರಲು ಸಾಧ್ಯವಿಲ್ಲ. ಸಚಿವರ ಈ ನಿರ್ಧಾರ ಸಂವಿಧಾನದ 14ನೇ ವಿಧಿಯಡಿ ಕೊಡಮಾಡಲಾದ ಸಮಾನತೆಯ ಹಕ್ಕಿನ ಉಲ್ಲಂಘನೆ. 21ನೇ ವಿಧಿಯಡಿಯ ಶಿಕ್ಷಣ ಹಕ್ಕಿನ ಮೇಲೂ ಪರಿಣಾಮ ಬೀರಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಅಸ್ಥಿರಗೊಳಿಸುತ್ತದೆ. ಆದ್ದರಿಂದ, ಸರ್ಕಾರದ ನಿರ್ಧಾರವನ್ನು ರದ್ದುಪಡಿಸುವ ನಿಟ್ಟಿನಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸಬೇಕು’ ಎಂದು ಕೋರಲಾಗಿತ್ತು.

‘ಸಚಿವರ ಈ ನಿರ್ಧಾರ ವಿದ್ಯಾರ್ಥಿಗಳ ಶೈಕ್ಷಣಿಕ ವೃತ್ತಿಜೀವನ ಮತ್ತು ಸಾರ್ವಜನಿಕ ವಲಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಈ ನಡೆ ರಾಜಕೀಯ ಪ್ರೇರಿತವಾಗಿದೆ ಮತ್ತು ಸರ್ಕಾರದ ನೀತಿಗೆ ವಿರುದ್ಧವಾಗಿದೆ’ ಎಂದು ಅರ್ಜಿದಾರರು ದೂರಿದ್ದರು.

ಅಧಿಸೂಚನೆ ಕರಡು ಪ್ರಕಟ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ಹಾಗೂ ರಾಷ್ಟ್ರೀಯ ಕೌಶಲ ಅರ್ಹತಾ ಚೌಕಟ್ಟು (ಎನ್ಎಸ್ಕ್ಯೂಎಫ್) ವಿಷಯಗಳಿಗೆ ಗ್ರೇಡ್ ನೀಡುವ ಕರಡು ಅಧಿಸೂಚನೆಯನ್ನು ಶಾಲಾ ಶಿಕ್ಷಣ ಇಲಾಖೆ ರಾಜ್ಯ ಪತ್ರದಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆ ಸಲ್ಲಿಸಲು 7 ದಿನಗಳ ಅವಕಾಶ ನೀಡಿದೆ.

‘ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಪರಿಗಣಿಸುವುದಿಲ್ಲ. ಗರಿಷ್ಠ ಅಂಕಗಳನ್ನು 625ರ ಬದಲು 525 ಎಂದು ಪರಿಗಣಿಸಲಾಗುವುದು. ತೃತೀಯ ಭಾಷೆಗೆ ಅಂಕಗಳ ಬದಲು ನಾಲ್ಕು ಶ್ರೇಣಿಗಳನ್ನು ನೀಡಲಾಗುವುದು’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದರು.

‘ತೃತೀಯ ಭಾಷೆ, ಎನ್ಎಸ್ಕ್ಯೂಎಫ್ ವಿದ್ಯಾರ್ಥಿಗಳು ಗಳಿಸುವ ಅಂಕಗಳ ಆಧಾರದ ಮೇಲೆ ಎ,ಬಿ,ಸಿ ಎಂಬ ಮೂರು ಶ್ರೇಣಿಗಳನ್ನು ನೀಡಲಾಗುತ್ತದೆ. ಈ ವಿಷಯದಲ್ಲಿ ಶೇ 80ರಿಂದ 100 ಅಂಕ ಪಡೆದರೆ ‘ಎ’ ಶ್ರೇಣಿ, ಶೇ 50 ರಿಂದ 79ರವರೆಗೆ ‘ಬಿ’ ಮತ್ತು ಶೇ 49ರವರೆಗೆ ‘ಸಿ’ ಶ್ರೇಣಿ ನೀಡಲಾಗುವುದು. ಈ ನಿಯಮವನ್ನು 2025–26ನೇ ಸಾಲಿನ ಪರೀಕ್ಷೆಯಿಂದಲೇ ಅನ್ವಯಿಸಲಾಗುತ್ತದೆ’ ಎಂದು ಕರಡು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಅಭ್ಯರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆಯಲ್ಲಿ ಶೇ 33 ಅಂಕಗಳನ್ನು ಪಡೆಯಬೇಕು. ಒಟ್ಟು 525 ಅಂಕಗಳಲ್ಲಿ ಕನಿಷ್ಠ 173 ಅಂಕಗಳನ್ನು ಗಳಿಸುವುದರೊಂದಿಗೆ ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಪ್ರತಿ ವಿಷಯದಲ್ಲಿ ಕನಿಷ್ಠ 30 ಅಂಕಗಳನ್ನು ಗಳಿಸಿದರೆ ಅಂತಹ ಅಭ್ಯರ್ಥಿಗಳನ್ನು ಉತ್ತೀರ್ಣ ಎಂದು ಘೋಷಿಸಲಾಗುವುದು ಎಂದು ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.