ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು ವಕೀಲ ಪ್ರೀತಂ ಮೇಲೆ ಹಲ್ಲೆ: ಅರ್ಜಿ ವಿಲೇವಾರಿ ಮಾಡಿದ ಹೈಕೋರ್ಟ್

Published 13 ಡಿಸೆಂಬರ್ 2023, 20:06 IST
Last Updated 13 ಡಿಸೆಂಬರ್ 2023, 20:06 IST
ಅಕ್ಷರ ಗಾತ್ರ

ಬೆಂಗಳೂರು: ‘ಚಿಕ್ಕಮಗಳೂರಿನ ವಕೀಲ ಎನ್‌.ಟಿ.ಪ್ರೀತಮ್ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿರುವ ಕ್ರಮ ತೃಪ್ತಿಕರವಾಗಿದೆ‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್‌, ಈ ಸಂಬಂಧದ ಅರ್ಜಿಯನ್ನು ವಿಲೇವಾರಿ ಮಾಡಿದೆ.

ಈ ಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್ ಕೆ.ಶಶಿಕಿರಣ ಶೆಟ್ಟಿ, ಈ ಹಿಂದಿನ ವಿಚಾರಣೆ ವೇಳೆ ಹೈಕೋರ್ಟ್‌ ನೀಡಿದ್ದ ನಿರ್ದೇಶನದಂತೆ ರಾಜ್ಯ ವಕೀಲರ ಪರಿಷತ್‌, ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವಕೀಲರ ಸಂಘದ ಪ್ರತಿನಿಧಿಗಳ ಜೊತೆ ಇದೇ 9ರಂದು ನಡೆಸಿದ್ದ ಸಭೆಯ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ‘ರಾಜ್ಯ ಸರ್ಕಾರವು ಪ್ರಕರಣದ ಕುರಿತಂತೆ ಸೂಕ್ತ ಕ್ರಮ ಕೈಗೊಂಡಿದೆ. ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ‘ ಎಂದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ನ್ಯಾಯಪೀಠ, ‘ತನಿಖೆಯ ಮೇಲ್ವಿಚಾರಣೆ ನ್ಯಾಯಾಲಯದ ಕರ್ತವ್ಯವಲ್ಲ ಮತ್ತು ನಿಗದಿತ ಕಾಲಮಿತಿಯಲ್ಲಿ ತನಿಖೆ ಪೂರ್ಣಗೊಳಿಸುವಂತೆ ನಿರ್ದೇಶಿಸಲು ಸಾಧ್ಯವಿಲ್ಲ. ಹೀಗಾಗಿ, ಅರ್ಜಿಯನ್ನು ಇನ್ನೂ ವಿಚಾರಣೆಗೆ ಉಳಿಸಿಕೊಳ್ಳುವ ಅಗತ್ಯವಿಲ್ಲ‘ ಎಂಬ ಅಭಿಪ್ರಾಯದೊಂದಿಗೆ ವಿಲೇವಾರಿ ಮಾಡಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT