ಬೆಂಗಳೂರು: ‘ನನ್ನ ಆಕ್ಷೇಪಾರ್ಹ ಹೇಳಿಕೆಗಳು ಯಾರಿಗಾದರೂ ನೋವುಂಟು ಮಾಡಿದ್ದರೆ ಅದಕ್ಕಾಗಿ ಪ್ರಾಮಾಣಿಕ ವಿಷಾದ ವ್ಯಕ್ತಪಡಿಸುತ್ತೇನೆ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ತಿಳಿಸಿದ್ದಾರೆ.
ಹೈಕೋರ್ಟ್‌ನ 23ನೇ ಕೋರ್ಟ್ ಹಾಲ್‌ನಲ್ಲಿ ಶನಿವಾರ ಮಧ್ಯಾಹ್ನ 2.30ಕ್ಕೆ ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಮತ್ತು ವಕೀಲರ ಎದುರು ಮುಕ್ತ ನ್ಯಾಯಾಲಯದಲ್ಲಿ ಈ ಕುರಿತಂತೆ ವಿವರಿಸಿದ ಅವರು ವಿಷಾದ ವ್ಯಕ್ತಪಡಿಸಿದರು.
ಈ ವೇಳೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ, ಖಜಾಂಚಿ ಎಂ.ಟಿ.ಹರೀಶ್ ಮತ್ತು ಹೈಕೋರ್ಟ್ ಕಾರ್ಯಕಾರಿ ಸಮಿತಿ ಸದಸ್ಯರು, ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಗೂ ವಕೀಲರು ಕೋರ್ಟ್ ಹಾಲ್‌ನಲ್ಲಿ ಹಾಜರಿದ್ದರು.
ಏನಿದು ಪ್ರಕರಣ?:
ನ್ಯಾಯಮೂರ್ತಿ ಶ್ರೀಶಾನಂದ ಅವರು ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ, ‘ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಂತಿದೆ’ ಎಂದು ಬಣ್ಣಿಸಿದ್ದು ಹಾಗೂ ಮಹಿಳಾ ವಕೀಲೆಯೊಬ್ಬರಿಗೆ, ‘ನಿಮ್ಮ ಪ್ರತಿವಾದಿ ಯಾವ ಬಣ್ಣದ ಒಳ ಉಡುಪು ಧರಿಸಿದ್ದಾರೆ ಎಂಬುದನ್ನೂ ನೀವು ಹೇಳಬಲ್ಲಷ್ಟು ಅವರನ್ನು ಅರಿತಿದ್ದೀರಿ’ ಎಂದು ವ್ಯಂಗ್ಯವಾಡಿದ್ದರು.
ಈ ಮೌಖಿಕ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ, ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ‘ಎಕ್ಸ್’ನಲ್ಲಿ ನ್ಯಾಯಮೂರ್ತಿಗಳ ಈ ಹೇಳಿಕೆಯ ವಿಡಿಯೊ ತುಣುಕನ್ನು ಹರಿಬಿಟ್ಟಿದ್ದರು. ‘ಈ ನ್ಯಾಯಮೂರ್ತಿಗೆ ಲಿಂಗ ಸಂವೇದನಾ ತರಬೇತಿ ನೀಡುವ ಅಗತ್ಯವಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರ ನ್ಯಾಯಪೀಠವು, ಶುಕ್ರವಾರ (ಸೆ.20) ಬೆಳಿಗ್ಗೆಯೇ ಈ ವಿಷಯದ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ‘ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಈ ಕುರಿತಂತೆ ವಿವರವದ ವರದಿ ಸಲ್ಲಿಸಬೇಕು’ ಎಂದು ತಾಕೀತು ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.