ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

BSY ವಿರುದ್ಧ ಪೋಕ್ಸೊ ಪ್ರಕರಣ: ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದ ಸಿದ್ದರಾಮಯ್ಯ

Published 14 ಜೂನ್ 2024, 13:56 IST
Last Updated 14 ಜೂನ್ 2024, 13:56 IST
ಅಕ್ಷರ ಗಾತ್ರ

ಮೈಸೂರು: ಹದಿನೇಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಬಂಧನ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿ ಆದೇಶಿಸಿರುವ ಬಗ್ಗೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ನಿರಾಕರಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಎಂದಿಗೂ ಧ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ನಿರ್ವಹಿಸುತ್ತೇವೆ. ನ್ಯಾಯಾಲಯದ ಆದೇಶಕ್ಕೆ ಎಲ್ಲರೂ ತಲೆ ಬಾಗಬೇಕು. ವಿರೋಧ ಪಕ್ಷದವರ ಎಲ್ಲ ಆರೋಪಗಳಿಗೂ ಉತ್ತರ ಕೊಡಬೇಕೆಂದೇನಿಲ್ಲ. ಕಾನೂನು ಹೇಳಿದಂತೆ ನಡೆದುಕೊಳ್ಳುತ್ತೇವಷ್ಟೆ’ ಎಂದರು.

‘ರಾಜ್ಯದಲ್ಲಿ ವಿರೋಧ ಪಕ್ಷದವರ ವಿರುದ್ಧ ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ’ ಎಂಬ ಆರೋಪಕ್ಕೆ, ‘ಯಡಿಯೂರಪ್ಪ ಅವರ ವಿರುದ್ಧ ದೂರು ಕೊಟ್ಟಿರುವುದು ಸರ್ಕಾರವೇ?’ ಎಂದು ಕೇಳಿದರು.

ಚಲನಚಿತ್ರ ನಟ ದರ್ಶನ್‌ ತೂಗುದೀಪ ವಿಚಾರಣೆ ನಡೆಸುತ್ತಿರುವ ಪೊಲೀಸ್ ಠಾಣೆಗೆ ಶಾಮಿಯಾನ ಕಟ್ಟಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಪೊಲೀಸರು ಏನು ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅವರು ನಮ್ಮನ್ನು ಕೇಳಿ ಏನನ್ನೂ ಮಾಡುವುದಿಲ್ಲ. ಆ ಠಾಣೆ ಬಳಿ ಸಾರ್ವಜನಿಕರಿಗೆ ತೊಂದರೆ ಆಗಿರುವ ಬಗ್ಗೆ ಯಾರೂ ದೂರು ನೀಡಿಲ್ಲ. ದರ್ಶನ್‌ ಪ್ರಕರಣದಲ್ಲಿ ನನ್ನ ಬಳಿ ಪ್ರಭಾವ ಬೀರಲು ನನ್ನ ಬಳಿಗೆ ಯಾರೂ ಬಂದಿಲ್ಲ. ಬಂದಿದ್ದರು ಎನ್ನುವುದೆಲ್ಲವೂ ಸುದ್ದಿಯಷ್ಟೆ. ಅದ್ಯಾವುದು ಸತ್ಯವಲ್ಲ. ಈ ನೆಲದ ಕಾನೂನಿನಂತೆ ಕೆಲಸ ಮಾಡುತ್ತೇವೆ’ ಎಂದು ತಿಳಿಸಿದರು.

‘ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ; ಅವು ಮುಂದುವರಿಯುತ್ತವೆ. ಪುನರ್‌ ಪರಿಶೀಲನೆಯನ್ನೂ ಮಾಡುವುದಿಲ್ಲ. ನಾವು ಚುನಾವಣೆಗಾಗಿ ಅವುಗಳನ್ನು ಜಾರಿಗೊಳಿಸಿಲ್ಲ. ಬಡವರಿಗೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಶಕ್ತಿ ತುಂಬಲು ಮಾಡಿದ್ದೇವೆ. ಬಡವರ ಯೋಜನೆಗಳನ್ನು ನಿಲ್ಲಿಸುವುದಿಲ್ಲ’ ಎಂದರು.

ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗುತ್ತಿಲ್ಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಇನ್ನೂ ಸಮಯವಿದೆ. ನೋಡೋಣ. ಮೋಡವಿದ್ದರೆ ತಾನೆ ಮೋಡ ಬಿತ್ತನೆ ಮಾಡುವುದು? ಪರಿಣತರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

7ನೇ ವೇತನ ಆಯೋಗದ ವರದಿಯ ಶಿಫಾರಸು ಜಾರಿ ಕುರಿತ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಲಿಲ್ಲ.

‘ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸೋತಿರುವುದು ಸತ್ಯ. ನೆರೆಯ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಹೋದ ಬಾರಿ ಸೋತಿದ್ದೆವು. ಆದರೆ, ಈ ಬಾರಿ ಗೆದ್ದಿದ್ದೇವೆ. ರಾಜ್ಯದಲ್ಲಿ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಒಂದು ಸೀಟು ಪಡೆದಿದ್ದೆವು. ಈಗ 9 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಶೇ 13ರಷ್ಟು ಹೆಚ್ಚಿನ ಮತಗಳನ್ನು ತೆಗೆದುಕೊಂಡಿದ್ದೇವೆ. ಹಾಗೆಂದು ಬೆನ್ನು ತಟ್ಟಿಕೊಳ್ಳುವುದಿಲ್ಲ. ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬಂದಿಲ್ಲ. ಇದಕ್ಕೆ ಕಾರಣವೇನು ಎಂಬ ಬಗ್ಗೆ ಮಾಧ್ಯಮದಲ್ಲಿ ಚರ್ಚಿಸುವುದಿಲ್ಲ; ಪಕ್ಷದ ವೇದಿಕೆಯಲ್ಲಿ ಹೇಳುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

ಸಚಿವರಾದ ಡಾ.ಎಚ್‌.ಸಿ, ಮಹದೇವಪ್ಪ, ಕೆ.ವೆಂಕಟೇಶ್, ಶಾಸಕ ಡಿ.ರವಿಶಂಕರ್‌, ಸಂಸದ ಸುನೀಲ್ ಬೋಸ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌, ಕಾಂಗ್ರೆಸ್‌ ನಗರ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT