ಬೆಂಗಳೂರು: ಸರ್ಕಾರಿ ನೌಕರರೊಬ್ಬರು ಲಂಚ ಪಡೆದ ಪ್ರಕರಣವೊಂದರಲ್ಲಿ, ಲೋಕಾಯುಕ್ತ ಶಿಫಾರಸು ಮಾಡಿದ್ದಕ್ಕಿಂತ ಕಡಿಮೆ ಶಿಕ್ಷೆ ವಿಧಿಸಿದ ಸರ್ಕಾರದ ಆದೇಶ ಪ್ರಶ್ನಿಸಲಾದ ಅರ್ಜಿಯಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಲೋಕಾಯುಕ್ತರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ‘ನಿರ್ದಿಷ್ಟ ಶಿಕ್ಷೆ ವಿಧಿಸಲು ಲೋಕಾಯುಕ್ತರು ಶಿಫಾರಸು ಮಾಡಿದ್ದಾರೆ ಎಂಬ ಕಾರಣಕ್ಕೆ ವಿವೇಚನೆ ಚಲಾಯಿಸುವ ಶಿಸ್ತು ಪ್ರಾಧಿಕಾರದ ಅಧಿಕಾರವನ್ನು ಕಸಿದುಕೊಳ್ಳಲಾಗುವುದಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.
‘ಸರ್ಕಾರಿ ಅಧಿಕಾರಿಯ ವಿರುದ್ಧ ತನಿಖೆ ಪೂರ್ಣಗೊಂಡು ನಿರ್ದಿಷ್ಟ ಶಿಕ್ಷೆ ವಿಧಿಸುವಂತೆ ಲೋಕಾಯುಕ್ತರು ಶಿಫಾರಸು ಮಾಡಿದ ನಂತರ ಅಂತಹ ಅಧಿಕಾರಿಗೆ ಕಡಿಮೆ ಶಿಕ್ಷೆ ವಿಧಿಸಲು ಶಿಸ್ತುಪಾಲನಾ ಪ್ರಾಧಿಕಾರಕ್ಕೆ ಇರುವ ಅಧಿಕಾರ ಕೈತಪ್ಪುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.
ಪ್ರಕರಣವೇನು?:
ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಚಂದ್ರಶೇಖರ್ ಎಂಬುವವರು 2009ರಲ್ಲಿ ₹ 700 ಲಂಚ ಪಡೆದ ಆರೋಪ ಎದುರಿಸುತ್ತಿದ್ದರು. ಈ ಪ್ರಕರಣದ ತನಿಖೆಯನ್ನು 2011ರ ಜುಲೈ 22ರಂದು ಲೋಕಾಯುಕ್ತರಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತರು ಚಂದ್ರಶೇಖರ್ ವಿರುದ್ಧದ ಆರೋಪಗಳು ಸಾಬೀತಾದ ಕಾರಣ, ಅವರನ್ನು ಕಡ್ಡಾಯ ನಿವೃತ್ತಿಗೊಳಿಸುವಂತೆ ಶಿಫಾರಸು ಮಾಡಿದ್ದರು. ಆದರೆ, ಶಿಸ್ತುಪಾಲನಾ ಪ್ರಾಧಿಕಾರವು ಚಂದ್ರಶೇಖರ್ ಅವರನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸುವ ಬದಲಿಗೆ ಹಿಂಬಡ್ತಿ ನೀಡಿ ಆದೇಶಿಸಿತ್ತು. ಈ ಆದೇಶವನ್ನು ಹೈಕೋರ್ಟ್‌ನಲ್ಲಿಪ್ರಶ್ನಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.