ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಅಂದು ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
‘ನನ್ನ ವಿರುದ್ಧದ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಪ್ರಿಯಾಂಕ್ ಖರ್ಗೆ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದರು.
ಸಚಿವ ಪ್ರಿಯಾಂಕ್ ಖರ್ಗೆ ಪರ ಹಾಜರಾಗಿದ್ದ ಹಿರಿಯ ವಕೀಲ ಸಂದೇಶ್ ಜೆ.ಚೌಟ, ‘ಪ್ರಕರಣದ ಸಹ ಆರೋಪಿಗಳು ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ಮತ್ತೊಂದು ಪೀಠ 2024ರ ಮೇ 7ರಂದು ವಜಾಗೊಳಿಸಿದೆ. ಸಹ ಆರೋಪಿಗಳಿಗೆ ₹10 ಸಾವಿರ ದಂಡ ಸಹ ವಿಧಿಸಲಾಗಿತ್ತು’ ಎಂದರು.
‘ಹೈಕೋರ್ಟ್ ನೀಡಿದ್ದ ಈ ಆದೇಶವನ್ನು ಪ್ರಶ್ನಿಸಿ ಸಹ ಆರೋಪಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಈಗಾಗಲೇ ತಡೆ ನೀಡಿದೆ. ಆದ್ದರಿಂದ, ಪ್ರಿಯಾಂಕ್ ಖರ್ಗೆ ವಿರುದ್ಧದ ವಿಚಾರಣೆಗೂ ತಡೆ ನೀಡಬೇಕು’ ಎಂದು ಕೋರಿದರು. ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ ತಡೆ ಆದೇಶ ನೀಡಿತು.
ಸಹ ಆರೋಪಿಗಳು: ಪ್ರಕರಣದ ಸಹ ಆರೋಪಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.ಪಾಟೀಲ್ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ್ದ ಹೈಕೋರ್ಟ್‌ನ ಮತ್ತೊಂದು ನ್ಯಾಯಪೀಠ, ಈ ಅರ್ಜಿದಾರರಿಗೆ ತಲಾ ₹10 ಸಾವಿರ ದಂಡ ವಿಧಿಸಿತ್ತು. ಈ ಸಹ ಆರೋಪಿಗಳೆಲ್ಲರೂ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.