ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

MLC Election:ಬಿಲ್ಕಿಸ್ ಬಾನೊ ಸೇರಿ 8 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.
Published 2 ಜೂನ್ 2024, 11:55 IST
Last Updated 2 ಜೂನ್ 2024, 11:55 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ಭಾನುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಹೊರಡಿಸಿರುವ ಪಟ್ಟಿ ಪ್ರಕಾರ ಸಣ್ಣ ನೀರಾವರಿ ಸಚಿವ ಎನ್‌.ಎಸ್. ಬೋಸರಾಜು, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್, ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ, ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷೆ ಹಾಗೂ ಶಿವಮೊಗ್ಗ ಮೂಲದ ಬಿಲ್ಕಿಸ್ ಬಾನೊ, ಕಲಬುರಗಿ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ್ ಹಾಗೂ ರಾಯಚೂರು ಕಾಂಗ್ರೆಸ್ ಮುಖಂಡ ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್ ನೀಡಲಾಗಿದೆ.

ಜೂನ್ 13 ರಂದು 11 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಗದೀಶ್ ಶೆಟ್ಟರ್ ಅವರಿಂದ ತೆರವಾಗಿರುವ ಸ್ಥಾನಕ್ಕೂ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದ್ದು ಆ ಸ್ಥಾನವೂ ಸೇರಿದಂತೆ ಕಾಂಗ್ರೆಸ್ ಪಟ್ಟಿ ಪ್ರಕಟಿಸಲಾಗಿದೆ. ಜಗದೀಶ್ ಶೆಟ್ಟರ್ ಸ್ಥಾನದಲ್ಲಿ ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್ ನೀಡಲಾಗಿದೆ.

ವಿಧಾನಸಭೆಯ ಬಲಾಬಲದ ಪ್ರಕಾರ, ಮೊದಲ 11 ಸ್ಥಾನಗಳಲ್ಲಿ ಏಳು ಕಾಂಗ್ರೆಸ್‌ ಪಾಲಾಗಲಿವೆ. ಬಿಜೆಪಿಗೆ ಮೂರು, ಜೆಡಿಎಸ್‌ಗೆ ಒಂದು ಸ್ಥಾನ ದೊರಕಲಿವೆ. 

ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಜಿಗಿದಿದ್ದ ಕೆ.ಪಿ.ನಂಜುಂಡಿ ಅವರಿಗೆ ನಿರಾಸೆಯಾಗಿದೆ.

ಎರಡನೇ ಬಾರಿ ಕೆಪಿಸಿಸಿ ಖಜಾಂಚಿಯಾಗಿರುವ ವಿನಯ್‌ ಕಾರ್ತಿಕ್‌, ಡಿ.ಕೆ.ಶಿವಕುಮಾರ್ ಆಪ್ತ, ಕೆಪಿಸಿಸಿ ಆಡಳಿತ ವಿಭಾಗದ ಪ್ರಧಾನ ಕಾರ್ಯದರ್ಶಿ ವಿಜಯ್‌ ಮುಳುಗುಂದ್, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್‌, ರಾಷ್ಟ್ರೀಯ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌, ಡಿ. ದೇವರಾಜ ಅರಸು ಅವರ ಮೊಮ್ಮಗ ಸೂರಜ್‌ ಹೆಗ್ಡೆ, ಕೆಪಿಸಿಸಿ ಸಾಮಾಜಿಕ ನ್ಯಾಯ ಘಟಕದ ಅಧ್ಯಕ್ಷರಾದ ಸಿ.ಎಸ್‌. ದ್ವಾರಕಾನಾಥ್‌ ಅವರಿಗೂ ಕಾಂಗ್ರೆಸ್ ಪಟ್ಟಿಯಿಂದ ನಿರಾಸೆಯಾಗಿದೆ. 70 ಕ್ಕೂ ಹೆಚ್ಚು ಜನ ಕಾಂಗ್ರೆಸ್‌ನಿಂದ ಟಿಕೆಟ್ ಆಕಾಂಕ್ಷಿಗಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT