ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸ ಕಳೆದುಕೊಂಡ ನೆಟ್ಟಾರು ಪತ್ನಿ: ಕಾಂಗ್ರೆಸ್‌ನಿಂದ ದ್ವೇಷ ರಾಜಕಾರಣ ಎಂದ ಬಿಜೆಪಿ

Published 27 ಮೇ 2023, 5:21 IST
Last Updated 27 ಮೇ 2023, 5:21 IST
ಅಕ್ಷರ ಗಾತ್ರ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.

ನೂತನ ಕುಮಾರಿ ಅವರು ನೌಕರಿ ಕಳೆದುಕೊಂಡಿರುವ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ಪಕ್ಷವೇ ಸಾಕಿ‌ ಬೆಳೆಸಿದ ‘ಪಿಎಫ್ಐ’ ಎಂಬ ಭಯೋತ್ಪಾದಕ ಸಂಘಟನೆಯ ಕೋಮುದ್ವೇಷಕ್ಕೆ ಒಳಪಟ್ಟು, ಪಿಎಫ್‌ಐ ಗೂಂಡಾಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿಗೆ ಜೀವನ ನಿರ್ವಹಣೆಗಾಗಿ ಅನುಕಂಪದ ಆಧಾರದಲ್ಲಿ ನಮ್ಮ ಸರ್ಕಾರ ಮಂಗಳೂರಿನ ಡಿಸಿ ಕಚೇರಿಯಲ್ಲಿ ಉದ್ಯೋಗ ಕಲ್ಪಿಸಿತ್ತು.

ಈಗ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ದ್ವೇಷದ ರಾಜಕೀಯವನ್ನು ಮುಂದುವರೆಸಿರುವುದು ಖಂಡನೀಯ. ಈ ಕೂಡಲೇ ಸರ್ಕಾರ ಉದ್ಯೋಗದಿಂದ ವಜಾಮಾಡುವ ಅಮಾನವೀಯ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇವೆ. ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯರವರ ಸರಕಾರ ಕುಣಿಯುತ್ತಿರುವುದು ರಾಜ್ಯದ ದುರಂತ ಎಂದು ಬಿಜೆಪಿ ಟೀಕಿಸಿದೆ.

ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದ್ದರು.

ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು. ಈಗ ಕೆಲಸದಿಂದ ಬಿಡುಗಡೆಗೊಳಿಸಿರುವ ಆದೇಶ ಅವರ ಕೈ ತಲುಪಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು.

ನೂತನ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ಸ್ಥಳೀಯವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು. ಅವರು ಅಕ್ಟೋಬರ್ 14ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.

‘ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ತಮ್ಮನ್ನು ಮುಂದುವರಿಸಲು ನೂತನಕುಮಾರಿ ಅವರು ಕೋರಿದರೆ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT