ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಂಭವ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಕೇಂದ್ರ ತಿಳಿಸಿದೆ.
ಈ ವಿಚಾರವನ್ನು KSNDMC ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ, ಹಲವೆಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಕಳೆದ ಜುಲೈನಲ್ಲಿ ವಾಡಿಕೆಗಿಂತ ಅಧಿಕವಾಗಿ ಸುರಿದಿದ್ದ ಮಳೆ ಆಗಸ್ಟ್ ಮೊದಲ ಹಾಗೂ ಎರಡನೇ ವಾರದಲ್ಲಿ ಕಳೆಗುಂದಿತ್ತು. ಬಹುತೇಕ ರಾಜ್ಯದಾದ್ಯಂತ ಮಳೆ ಕಣ್ಮರೆಯಾಗಿತ್ತು. ಇದೀಗ ಮಳೆ ಬಿರುಸು ಪಡೆದುಕೊಳ್ಳುವ ಮುನ್ಸೂಚನೆ ಕಾಣಿಸಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.