ಹುಬ್ಬಳ್ಳಿ: ‘ರಾಜ್ಯದಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಸಚಿವರ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಾವೇರಿಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಮೊದಲು ಅಲ್ಲಿಗೆ ತೆರಳುತ್ತಿದ್ದೇನೆ. ನಂತರ ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಸಚಿವ ಕೃಷ್ಣಬೈರೇಗೌಡ ಕೊಡಗಿಗೆ ಭೇಟಿ ನೀಡಿದ್ದಾರೆ’ ಎಂದು ಹೇಳಿದರು.
‘ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಾಗಿತ್ತು. ಈಗ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದರೆ ಬರ ಆವರಿಸುತ್ತದೆ ಎಂಬುದು ಸುಳ್ಳು. ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆ ಇಲ್ಲ. ಪ್ರಕೃತಿಯಲ್ಲಿ ಪ್ರವಾಹ, ಮಳೆ ಕೊರತೆ ಆಗುವುದು ಸ್ವಾಭಾವಿಕ. ಹವಾಮಾನ ಬದಲಾವಣೆ ವಿಶ್ವದ ಎಲ್ಲಡೆ ಆಗುತ್ತಿದೆ’ ಎಂದರು.
ಸಚಿವರು ತಮಗೆ ಸ್ಪಂದಿಸುತ್ತಿಲ್ಲಎಂದು 30 ಶಾಸಕರು ಅಸಮಾಧಾನಗೊಂಡು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರು ಒತ್ತಾಯಿಸಿದ್ದರು. ಹೀಗಾಗಿ ಗುರುವಾರ (ಜುಲೈ 27) ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಅಲ್ಲಿ ಎಲ್ಲ ವಿಷಯಗಳನ್ನು ಚರ್ಚಿಸಲಾಗುವುದು. ಸರ್ಕಾರ ರಚನೆಯಾಗಿ ಕೇವಲ ಎರಡು ತಿಂಗಳಾಗಿವೆ. ಯಾವ ಶಾಸಕರೂ ದೂರು ನೀಡಿಲ್ಲ’ ಎಂದು ಹೇಳಿದರು.
‘ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಡೆದಿರುವ ಬಗ್ಗೆ ದೂರುಗಳು ಬಂದರೆ ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಎಚ್ಚರಿಸಿದರು.
ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿ, ‘ಈ ಬಗ್ಗೆ ಅವರು ಚರ್ಚೆ ನಡೆಸುತ್ತಿದ್ದಾರೆ. ಮೈತ್ರಿ ಮಾಡಿಕೊಂಡರೆ ನಾವು ಭಯ ಪಡುವುದಿಲ್ಲ. ಈ ಬಾರಿ 15–20 ಸ್ಥಾನಗಳನ್ನು ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.