ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ 25ರವರೆಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಂಭವವಿದ್ದು, ಶುಕ್ರವಾರದಿಂದ ಮೂರು ದಿನಗಳು ಉಡುಪಿ, ದಕ್ಷಿಣ ಕನ್ನಡದ ಜತೆಗೆ ಉತ್ತರ ಕನ್ನಡ ಜಿಲ್ಲೆಗೂ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಮುಂದಿನ ಐದು ದಿನಗಳು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.