ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ಮೈಬಣ್ಣದ ಬಗ್ಗೆ ಅವಹೇಳನ: ಜ್ಞಾನೇಂದ್ರ ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಆಗ್ರಹ

Published 2 ಆಗಸ್ಟ್ 2023, 8:16 IST
Last Updated 2 ಆಗಸ್ಟ್ 2023, 8:16 IST
ಅಕ್ಷರ ಗಾತ್ರ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಅವರು ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಕಸ್ತೂರಿ ರಂಗನ್‌ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನೀಡಿದ ಹೇಳಿಕೆ ಖಂಡಿಸಿ ತೀರ್ಥಹಳ್ಳಿ ತಾಲ್ಲೂಕು ಕಚೇರಿ ಮುಂಭಾಗ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಆರಗ ಜ್ಞಾನೇಂದ್ರ ಅವರು ಮಾತನಾಡಿದ್ದರು. ಇದೇ ವೇಳೆ ಸಚಿವ ಈಶ್ವರ್‌ ಖಂಡ್ರೆ ಮತ್ತು ಮಲ್ಲಿಕಾರ್ಜುನ ಖರ್ಗೆಗೆ ಅವಹೇಳನ ಮಾಡಿದ್ದರು.

ಆರಗ ಜ್ಞಾನೇಂದ್ರ ಹೇಳಿಕೆ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮಲ್ಲಿಕಾರ್ಜುನ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ. ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ’ ಎಂದು ಕಿಡಿಕಾರಿದೆ.

‘ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ. ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ. ಪಾಶ್ಚಿಮಾತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ. ಆದರೆ, ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಖರ್ಗೆ ಹಾಗೂ ದಲಿತರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಏನಿದು ವಿವಾದ?

ಕಸ್ತೂರಿ ರಂಗನ್‌ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಮಂಗಳವಾರ ತೀರ್ಥಹಳ್ಳಿಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಇಲ್ಲಿ ಮಾತನಾಡಿದ್ದ ಆರಗ ಜ್ಞಾನೇಂದ್ರ, ‘ಅರಣ್ಯ ಸಚಿವರಿಗೆ ಪಶ್ಚಿಮಘಟ್ಟದ ಜನರ ಜೀವನಕ್ರಮ, ಗಿಡ– ಮರಗಳ ಕುರಿತು ತಿಳಿವಳಿಕೆ ಇಲ್ಲ. ಪಶ್ಚಿಮ ಘಟ್ಟಗಳ ಬಗ್ಗೆ ವರದಿ ನೀಡಿರುವ ವಿಜ್ಞಾನಿ ಕಸ್ತೂರಿರಂಗನ್‌ ಪರಿಸರ ತಜ್ಞ ಅಲ್ಲ’ ಎಂದು ವಾಗ್ದಾಳಿ ನಡೆಸಿದ್ದರು.

‘ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗಿರುವುದು ನಮ್ಮ ದುರದೃಷ್ಟ. ಬೀದರ್‌ ಮೂಲದ ಅವರಿಗೆ ಮರ–ಗಿಡ ಅಂದರೆ ಏನು, ಅದರ ನೆರಳು ಅಂದರೆ ಏನು ಎಂಬುದೇ ಗೊತ್ತಿಲ್ಲ. ಅವರಿಗೆ ಮಲೆನಾಡಿನವರ ಬದುಕು, ಪಶ್ಚಿಮ ಘಟ್ಟದವರ ಸಮಸ್ಯೆಗಳ ಬಗ್ಗೆ ಗೊತ್ತಿಲ್ಲ. ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೇ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ. ಪಾಪ ಅವರ ತಲೆಕೂದಲು ಮುಚ್ಚಿಕೊಂಡಿದ್ದರಿಂದ ಸ್ವಲ್ಪ ಉಳಕೊಂಡಿದ್ದಾರೆ. ಅದೇ ಅವರ ನೆರಳು. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳ ಬೇಕು’ ಎಂದಿದ್ದರು.

‘ಮೂಲ ನಿವಾಸಿಗಳಿಲ್ಲದಿದ್ದರೆ ಸಹ್ಯಾದ್ರಿಯ ಅರಣ್ಯ ಶ್ರೇಣಿ ಉಳಿಯುತ್ತಿರಲಿಲ್ಲ. ದೆಹಲಿಯಲ್ಲಿ ಕುಳಿತು ಉಪಗ್ರಹ ಚಿತ್ರಗಳನ್ನು ಅವಲೋಕಿಸಿ ಅವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲಾಗಿದೆ. ಈಗಾಗಲೇ ಹಲವು ಕಾಯ್ದೆಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕಸ್ತೂರಿರಂಗನ್‌ ವರದಿ ಜಾರಿಯಾದರೆ ಸಮಸ್ಯೆ ಬಿಗಡಾಯಿಸಲಿದೆ’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT